ADVERTISEMENT

ಚನ್ನಪಟ್ಟಣದಲ್ಲಿ ಸೀರೆ, ಪಂಚೆ ಹಂಚಿಕೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2024, 15:23 IST
Last Updated 1 ನವೆಂಬರ್ 2024, 15:23 IST
ತುಮಕೂರು ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ್ದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು, ಇತರರು ಉಪಸ್ಥಿತರಿದ್ದರು
ತುಮಕೂರು ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ್ದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು, ಇತರರು ಉಪಸ್ಥಿತರಿದ್ದರು   

ತುಮಕೂರು: ಸೀರೆ, ಪಂಚೆ ಹಂಚಿಕೆ ಮಾಡಿ ಚನ್ನಪಟ್ಟಣ ಉಪಚುನಾವಣೆ ಗೆಲ್ಲಲು ಕಾಂಗ್ರೆಸಿಗರು ಮುಂದಾಗಿದ್ದಾರೆ ಎಂದು ಕೇಂದ್ರ ಕೈಗಾರಿಕಾ ಸಚಿವರೂ ಆದ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಭೇಟಿನೀಡಿ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸಿಗರು ಸೀರೆ, ಪಂಚೆ, ಗ್ಯಾರಂಟಿ ಕಾರ್ಡ್ ಹಂಚಿ ಗೆಲುವು ಸಾಧಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಸೀರೆ ಹಂಚಿರಲಿಲ್ಲವೆ? ಕಾಂಗ್ರೆಸ್‌ನವರು ಗ್ಯಾರಂಟಿ ಕಾರ್ಡ್ ಕೊಟ್ಟಿರಲಿಲ್ಲವೆ? ಎಂದು ಪ್ರಶ್ನಿಸಿದರು. ಈ ಬಾರಿಯೂ ಸೀರೆ, ಪಂಚೆ ಹಂಚುವ ಪ್ರಯತ್ನ ಮಾಡುತ್ತಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಬಳಿ ಸೀರೆ, ಪಂಚೆ, ಶರ್ಟ್‌ ವಶಪಡಿಸಿಕೊಂಡಿದ್ದು, ಅದಕ್ಕೂ ನಮಗೂ ಸಂಬಂಧವಿಲ್ಲ. ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ ಎಂದು ಹೇಳಿದರು.

ADVERTISEMENT

‘ನಾನು ಶಾಸಕನಾಗಿದ್ದ ಸಮಯದಲ್ಲಿ ಚನ್ನಪಟ್ಟಣ ಕ್ಷೇತ್ರವನ್ನು ಕಡೆಗಣಿಸಿದ್ದೆ’ ಎಂಬ ಟೀಕೆಗೆ ಉತ್ತರ ನೀಡಬೇಕಿಲ್ಲ. ಅದಕ್ಕೆ ಕ್ಷೇತ್ರದ ಜನರು ಉತ್ತರ ಕೊಡುತ್ತಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ನವರು ಎಷ್ಟೇ ಅಪಪ್ರಚಾರ ಮಾಡಿದರೂ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪಾಪದ ಫಲದಿಂದ ಹಿಂದಿನ ಚುನಾವಣೆಗಳಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಬಡವರ ಜಮೀನು ದರೋಡೆ ಮಾಡಿದ್ದಾನೆಯೆ? ಗಣಿಗಾರಿಕೆಗಾಗಿ ಎಷ್ಟು ಕುಟುಂಬ ಹಾಳು ಮಾಡಿದ್ದಾನೆ?’ ಎಂದು ಪ್ರಶ್ನಿಸಿದರು. ಇಂತಹ ಪಾಪದ ಕೆಲಸ ಮಾಡಿರುವುದು ಕಾಂಗ್ರೆಸ್‌ನವರು. ಅದರ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ ಎಂದು ತಿಳಿಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು, ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.