ತುಮಕೂರು: ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ಮಂಗಳವಾರ ಆದೇಶಿಸಲಾಗಿದೆ.
ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸೂತಿ ತಜ್ಞರು ಹಾಗೂ ಸ್ತ್ರೀರೋಗ ತಜ್ಞರಾದ ಡಾ.ಪೂಜ, ಶುಶ್ರೂಷಣಾಧಿಕಾರಿ ಜಿ.ಪದ್ಮಾವತಿ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗದ ತಜ್ಞ ಸಿಬ್ಬಂದಿ ಬಿ.ಆರ್.ಕಿರಣ್ ಅವರನ್ನು ವಜಾ ಮಾಡಲಾಗಿದೆ. ಕರ್ತವ್ಯ ಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ವಜಾಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ಶಸ್ತ್ರ ಚಿಕಿತ್ಸೆಯ ನಂತರ ಸೋಂಕು ಹರಡಿ ಮಹಿಳೆಯರು ಸಾವನ್ನಪ್ಪಿರುವುದು ಮೇಲು ನೋಟಕ್ಕೆ ಕಂಡು ಬಂದಿದೆ. ಶಸ್ತ್ರ ಚಿಕಿತ್ಸಾ ಪ್ರಕ್ರಿಯೆಯಲ್ಲಿ ಲೋಪ ಕಂಡು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ಈ ವರದಿ ಆಧಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.