ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಸೋರಲಮಾವು ಗ್ರಾಮದಲ್ಲಿ ಕಳೆದ ಎರಡು ದಿನಗಳ ಅಂತರದಲ್ಲಿ ವಾಂತಿ–ಭೇದಿಯಿಂದ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಮಂಗಳವಾರ ಗುಂಡಮ್ಮ (60) ಎಂಬುವರು ಮೃತಪಟ್ಟಿದ್ದು, ಭಾನುವಾರ ಭುವನೇಶ್ವರಿ (10) ವಾಂತಿ, ಭೇದಿಯಿಂದ ಸಾವನ್ನಪ್ಪಿದ್ದರು. 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ರತ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದಲ್ಲಿರುವ ಮಿನಿ ನೀರಿನ ಟ್ಯಾಂಕ್‌ನಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ. ಇದೇ ನೀರು ಕುಡಿದು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
‘ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿದ್ದರೂ ಜಿಲ್ಲಾ ಆಡಳಿತ ಎಚ್ಚೆತ್ತುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಘಟನೆ ನಡೆದ ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುಮ್ಮನಾಗುತ್ತಾರೆ. ಜನರು ಜೀವ ಕಾಪಾಡುವತ್ತ ಹೆಜ್ಜೆ ಇಡುತ್ತಿಲ್ಲ. ಪ್ರಾಣ ಹೋದ ಮೇಲೆ ಬಂದು ಏನು ಮಾಡುತ್ತಾರೆ’ ಎಂದು ಸೋರಲಮಾವು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ, ಸಾವನ್ನಪ್ಪುವ ಪ್ರಕರಣಗಳು ಹೆಚ್ಚುತ್ತಿವೆ. ಜೂನ್‌ನಲ್ಲಿ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ 7 ಜನ ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಆಗಸ್ಟ್‌ನಲ್ಲಿ ಮಧುಗಿರಿ ತಾಲ್ಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿ, ಭೇದಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.