ADVERTISEMENT

ತುಮಕೂರು | 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ; 6 ಮೇವು ಬ್ಯಾಂಕ್‌ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 4 ಜೂನ್ 2024, 2:21 IST
Last Updated 4 ಜೂನ್ 2024, 2:21 IST
<div class="paragraphs"><p>ಮೇವು ಬ್ಯಾಂಕ್‌</p></div>

ಮೇವು ಬ್ಯಾಂಕ್‌

   

ಸಾಂದರ್ಭಿಕ ಚಿತ್ರ

ತುಮಕೂರು: ಜಿಲ್ಲೆಯಲ್ಲಿ ಆರಂಭಿಸಿದ್ದ 21 ಮೇವಿನ ಬ್ಯಾಂಕ್‌ಗಳ ಪೈಕಿ ಮೇವಿಗೆ ಬೇಡಿಕೆ ಇಲ್ಲದ 6 ಮೇವು ಬ್ಯಾಂಕ್‌ಗಳನ್ನು ಸ್ಥಗಿತಗೊಳಿಸಲಾಗಿದೆ.

ADVERTISEMENT

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯಲ್ಲಿ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಗಿರೀಶ್‌ಬಾಬು ರೆಡ್ಡಿ ಈ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮೇವು ಬ್ಯಾಂಕ್ ಪರಿಶೀಲಿಸಿ, ಅವಶ್ಯಕತೆ ಇಲ್ಲದಿದ್ದರೆ ಎಲ್ಲವನ್ನು ಸ್ಥಗಿತಗೊಳಿಸಬೇಕು. ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ವರದಿ (ಎಬಿಸಿ) ಪಡೆದು ನಾಯಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಸಾಂಕ್ರಾಮಿಕ ರೋಗ ಹರಡದಂತೆ ತಡೆಯಬೇಕು. ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆಗಳಿಂದ ರೋಗ ಹರಡುತ್ತದೆ. ಅಧಿಕಾರಿಗಳು ಶಾಲಾ– ಕಾಲೇಜು ಕೊಠಡಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು’ ಎಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ರವೀಶ್‌, ‘ಜಿಲ್ಲೆಯ 103 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿ ಮೂಲಕ ಹಾಗೂ 5 ಕಡೆ ಟ್ಯಾಂಕರ್‌ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ವಿವರಿಸಿದರು.

‘ಮಳೆಯಿಂದ ಕುಣಿಗಲ್‌ ತಾಲ್ಲೂಕಿನಲ್ಲಿ 3 ಮನೆ, ಗುಬ್ಬಿಯಲ್ಲಿ 15, ಚಿಕ್ಕನಾಯಕನಹಳ್ಳಿಯಲ್ಲಿ 7 ಮನೆ ಹಾಗೂ 38 ಹೆಕ್ಟೇರ್‌ ಪ್ರದೇಶದ ಅಡಿಕೆ, ಬಾಳೆ ತೋಟಕ್ಕೆ ಹಾನಿಯಾಗಿದೆ’ ಎಂದು ಆಯಾ ತಾಲ್ಲೂಕಿನ ತಹಶೀಲ್ದಾರರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಬಿ.ಸಿ.ಶಾರದಮ್ಮ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.