ADVERTISEMENT

545 ಪಿಎಸ್‌ಐ ನೇಮಕ | ಶೀಘ್ರ ಆದೇಶ ಪತ್ರ: ಗೃಹ ಸಚಿವ ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 8:07 IST
Last Updated 15 ಆಗಸ್ಟ್ 2024, 8:07 IST
ಜಿ.ಪರಮೇಶ್ವರ
ಜಿ.ಪರಮೇಶ್ವರ   

ತುಮಕೂರು: 545 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ತಿಂಗಳ ಅಂತ್ಯದೊಳಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಇಲ್ಲಿ ಗುರುವಾರ ತಿಳಿಸಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಗರಣದಿಂದಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆ ಅಂತಿಮ ಘಟ್ಟ ಮುಟ್ಟಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇನ್ನೂ 403 ಸಬ್‌ಇನ್‌ಸ್ಪೆಕ್ಟರ್ ನೇಮಕಾತಿಗೆ ಪರೀಕ್ಷೆ ನಡೆದಿದ್ದು, ಫಲಿತಾಂಶ ಪ್ರಕಟವಾಗಬೇಕಿದೆ. ಮತ್ತೂ 600 ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಆರಂಭವಾಗಬೇಕಿದೆ. ಈ ಎಲ್ಲಾ ಹಂತದ ನೇಮಕಾತಿ ಪೂರ್ಣಗೊಳ್ಳುವ ಹೊತ್ತಿಗೆ 1,500 ಸಬ್‌ಇನ್‌ಸ್ಪೆಕ್ಟರ್‌ಗಳನ್ನು ನೇಮಕ ಮಾಡಿಕೊಂಡಂತಾಗಲಿದೆ ಎಂದರು.

ADVERTISEMENT

ಮುಂದಿನ ದಿನಗಳಲ್ಲಿ ಹಂತಹಂತವಾಗಿ 20 ಸಾವಿರ ಕಾನ್‌ಸ್ಟೆಬಲ್‌ಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕೆಎಸ್‌ಆರ್‌ಪಿ 3,500 ಕಾನ್‌ಸ್ಟೆಬಲ್‌ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದರು.

ಗ್ಯಾರಂಟಿ: ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು. ಈ ಯೋಜನೆಗಳನ್ನು ಜಾರಿ ಮಾಡುವಾಗ ರೂಪಿಸಿದ ನಿಯಮಗಳೇ ಮುಂದುವರಿಯಲಿವೆ. ಹೊಸದಾಗಿ ಯಾವುದೇ ನಿಯಮಗಳನ್ನು ಸೇರಿಸುವುದಿಲ್ಲ. ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ಯೋಜನೆಯಿಂದ ಕೈಬಿಡಲಾಗುತ್ತದೆ ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷರೂ ಆಗಿದ್ದ ಪರಮೇಶ್ವರ ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.