ತುಮಕೂರು: ವಿದ್ಯಾರ್ಥಿ ನಿಲಯಗಳ ಅವ್ಯವಸ್ಥೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಹೇಳೋರು, ಕೇಳೋರು ಯಾರೂ ಇಲ್ಲದಂತಾಗಿದೆ ಎಂದು ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಸಮಯದಲ್ಲಿ ಸಚಿವರು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದು, ಅಲ್ಲಿನ ಅವ್ಯವಸ್ಥೆ ಕಂಡು ಕಿಡಿಕಾರಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಈ ವಿಚಾರವನ್ನು ಮತ್ತೊಮ್ಮೆ ಪ್ರಸ್ತಾಪಿಸಿದರು. ವಿದ್ಯಾರ್ಥಿ ಸಾವು ಗಮನಿಸಿದರೆ ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತದೆ. ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಚುರುಕು ಮುಟ್ಟಿಸಿದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ಹಾಸ್ಟೆಲ್‌ಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ ಸಹಿ ಹಾಕಲಷ್ಟೇ ತಮ್ಮ ಕೆಲಸ ಸೀಮಿತಗೊಳಿಸಿದಂತೆ ಕಾಣುತ್ತದೆ ಎಂದು ಚಾಟಿ ಬೀಸಿದರು.
ಶಾಲಾ- ಕಾಲೇಜು, ಆಸ್ಪತ್ರೆ, ಹಾಸ್ಟೆಲ್, ಇತರೆ ಕಚೇರಿಗಳಿಗೆ ತಿಂಗಳಿಗೆ ಒಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಅವ್ಯವಸ್ಥೆ ಕಂಡು ಬಂದರೆ ತಕ್ಷಣ ಸರಿಪಡಿಸಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಹಾಸ್ಟೆಲ್‌ಗಳಿಗೆ ಬಾಗಿಲುಗಳೇ ಇಲ್ಲ. ವಿದ್ಯಾರ್ಥಿನಿಯರು ವ್ಯಾಸಂಗ ಮಾಡುವ ಸ್ಥಳದಲ್ಲಿ ಇಂತಹ ಅವ್ಯವಸ್ಥೆ ಸಹಿಸುವುದಿಲ್ಲ. ಕೂಡಲೇ ವಸತಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಅಸಡ್ಡೆ ತೋರಿದ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ‘ಜಿಲ್ಲೆಯಲ್ಲಿ ಶಾಲಾ ಕಟ್ಟಡ, ಕಚೇರಿಗಳು ಶಿಥಿಲಾವಸ್ಥೆ ತಲುಪಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಕಟ್ಟಡದ ತಾರಸಿಯಲ್ಲಿ ಮರದ ಎಲೆಗಳು, ಕಸಕಡ್ಡಿ ಬಿದ್ದು ಸ್ವಚ್ಛಗೊಳಿಸದೆ ಮಳೆ ನೀರು ನಿಂತು ಕಟ್ಟಡಗಳ ಮೇಲ್ಚಾವಣಿ ಶಿಥಿಲಗೊಂಡು ಬೀಳುವ ದುಃಸ್ಥಿತಿಗೆ ತಲುಪುತ್ತಿವೆ. ಎಲ್ಲಾ ಕಚೇರಿಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ ಸುಮಾರು 30 ಸಾವಿರ ಫಲಾನುಭವಿಗಳ ಪೌತಿಖಾತೆ, ಹಕ್ಕು ಪತ್ರ ವಿತರಣೆ, ಪಿಂಚಣಿ ಸೌಲಭ್ಯ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ‘ಜಿಲ್ಲೆಯ 1.30 ಲಕ್ಷ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಸುಮಾರು ₹2 ಸಾವಿರ ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕೊಡಿಸಲಾಗುತ್ತದೆ. ಸವಲತ್ತುಗಳ ವಿತರಣೆ, ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.