ತುಮಕೂರು: ನಗರದಲ್ಲಿರುವ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮನೆ ಮುಂದೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ಹಾಕದೆ, ಅಡ್ಡ ಮತದಾನ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಅಂಜಿನಪ್ಪ ನೇತೃತ್ವದಲ್ಲಿ ಮುಖಂಡರಾದ ಬೆಳ್ಳಿ ಲೋಕೇಶ್, ದೇವರಾಜು, ಕೃಷ್ಣಮೂರ್ತಿ, ಪಾಲಿಕೆ ಸದಸ್ಯ ಎಚ್.ಡಿ.ಕೆ.ಮಂಜುನಾಥ್, ತಹೇರಾ ಹುನ್ನೀಸಾ ಮತ್ತು ಕಾರ್ಯಕರ್ತರು ಮುತ್ತಿಗೆ ಹಾಕಿದರು. ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜೆಡಿಎಸ್ ಮುಖಂಡರು ಹಾಗೂ ಪದಾಧಿಕಾರಿಗಳು ಮುತ್ತಿಗೆ ಹಾಕುವ ವಿಚಾರ ತಿಳಿದ ಶಾಸಕರು ಬೆಂಬಲಿಗರೊಂದಿಗೆ ರಸ್ತೆಯಲ್ಲಿ ನಿಂತು ಸ್ವಾಗತಿಸಲು ಕಾಯುತ್ತಿದ್ದರು. ಶಾಸಕರ ಬೆಂಬಲಿಗರು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಜೆಡಿಎಸ್ ಕಾರ್ಯಕರ್ತರ ಮಧ್ಯೆ ನುಗ್ಗಿದ ಶಾಸಕ ಎಸ್.ಆರ್.ಶ್ರೀನಿವಾಸ್ ವಾಗ್ವಾದ ನಡೆಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ಎರಡು ಕಡೆಯವರನ್ನು ನಿಯಂತ್ರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.