ತುಮಕೂರು: ಸರ್ಕಾರದ ಎಲ್ಲ ಇಲಾಖೆಗಳ ಶೇ 5ರಷ್ಟು ಅನುದಾನ ಅಂಗವಿಕಲರ ಅಭಿವೃದ್ಧಿಗೆ ಬಳಸಬೇಕು ಎಂಬ ನಿಯಮ ಇದ್ದರೂ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಂಗವಿಕಲರ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಇಲ್ಲಿ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದರು.
‘ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಶೇ 10ರಷ್ಟು ಅಂಗವಿಕಲರ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು. ಜಿಲ್ಲೆಯ 50 ಶಾಲೆಗಳಲ್ಲಿ ಕೇವಲ 15ರಿಂದ 20 ಜನ ಮಾತ್ರ ಇದ್ದಾರೆ. ಅಂಗವಿಕಲರ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಹಲವು ಯೋಜನೆಗಳಿಗೆ ಅರ್ಜಿಗಳೇ ಸಲ್ಲಿಕೆಯಾಗಿಲ್ಲ. ಸರ್ಕಾರದ ಯೋಜನೆ ಕುರಿತು ಎಲ್ಲ ಕಡೆ ಪ್ರಚಾರ ಮಾಡುವಂತೆ ಸೂಚಿಸಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯದಾದ್ಯಂತ ವಿವಿಧ ಕಾಯಿಲೆಗಳಿಂದ ಹಾಸಿಗೆ ಹಿಡಿದ ಅಂಗವಿಕಲರನ್ನು ಆರೈಕೆ ಮಾಡುತ್ತಿರುವವರಿಗೆ ಪ್ರತಿ ತಿಂಗಳು ₹1 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈ ವರ್ಷ ಹೊಸದಾಗಿ ಯೋಜನೆ ಪ್ರಾರಂಭಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಅಂಗವಿಕಲರ ಪುನರ್ವಸತಿ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಇದಕ್ಕಾಗಿ 7 ಸಾವಿರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ 320 ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 40 ಸಾವಿರ ಅಂಗವಿಕಲರಿದ್ದಾರೆ. ಅಂಗವಿಕಲರ ಹಕ್ಕುಗಳ ಅಧಿನಿಯಮ 2018ರಲ್ಲಿ ಜಾರಿಯಾಗಿದ್ದು, 21 ರೀತಿಯ ಅಂಗವಿಕಲತೆಯಿಂದ ಬಳಲುತ್ತಿರುವವರಿಗೆ ಸರ್ಕಾರದ ಸೌಲಭ್ಯ ಕಲ್ಪಿಸಲಾಗುತ್ತಿದೆ. ಅಂಗವಿಕಲರಿಗೆ ವಿವಿಧ ಸವಲತ್ತು ವಿತರಣೆಯಲ್ಲಿ ಅನ್ಯಾಯವಾದರೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.