ADVERTISEMENT

ತುಮಕೂರು | ನಿವೃತ್ತ ತಹಶೀಲ್ದಾರ್ ವಿರುದ್ಧ ಮೊಕದ್ದಮೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 15:48 IST
Last Updated 2 ಜುಲೈ 2024, 15:48 IST
ಟಿ.ಬಿ.ಜಯಚಂದ್ರ
ಟಿ.ಬಿ.ಜಯಚಂದ್ರ   

ತುಮಕೂರು: ನಿವೃತ್ತಿಯಾದ ನಂತರವೂ ಸರ್ಕಾರಿ ದಾಖಲೆ, ಕಡತಗಳನ್ನು ಹಿಂದಿರುಗಿಸದ ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಶಿರಾ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಮಯದಲ್ಲಿ ಈ ಸೂಚನೆ ನೀಡಿದ್ದಾರೆ.

ಶಿರಾ ತಾಲ್ಲೂಕಿನಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ 347 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 47 ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದಿರುವ ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿವೆ. ಅವುಗಳನ್ನು ವಿಲೇವಾರಿ ಮಾಡಲು ಅಗತ್ಯವಿರುವ ಕೆಲವು ದಾಖಲೆಗಳನ್ನು ಈ ಹಿಂದೆ ಶಿರಾದಲ್ಲಿ ಕಾರ್ಯನಿರ್ವಹಿಸಿರುವ ತಹಶೀಲ್ದಾರರು ಇಟ್ಟುಕೊಂಡಿದ್ದಾರೆ. ಈವರೆಗೂ ಕಚೇರಿಗೆ ವಾಪಸ್ ಮಾಡಿಲ್ಲ. ಹಾಗಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಡತ ಪಡೆದುಕೊಳ್ಳುವಂತೆ ತಿಳಿಸಿದರು.

ADVERTISEMENT

ಜನ ಸ್ಪಂದನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಹೆಚ್ಚಾಗಿ ಸ್ವೀಕೃತವಾಗಿದ್ದು, ಗ್ರಾಮ ಆಡಳಿತಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ನಕಾಶೆ ರಸ್ತೆಗಳನ್ನು ಸರ್ವೇ ಮಾಡಿಸಿ ಒತ್ತುವರಿಯಾಗಿದ್ದರೆ ತೆರವು ಮಾಡಿಸುವಂತೆ ಸಚಿವರು ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಜಿಲ್ಲೆಯಲ್ಲಿ ನಕಲಿ ಸಾಗುವಳಿ ಚೀಟಿಗಳನ್ನು ವಿತರಿಸಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಅವುಗಳ ಪರಿಶೀಲನೆಗೆ ವಿಶೇಷ ತಂಡವನ್ನು ಕರೆಸಲಾಗುವುದು’ ಎಂದು ಹೇಳಿದರು.

ಶಿರಾ ತಾಲ್ಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು. ತಾಲ್ಲೂಕಿನಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಒಂದು ಸಾವಿರ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ವಿತರಿಸಲಾಗುವುದು ಎಂದು ತಿಳಿಸಿದರು.

ಜಿ.ಪಂ ಸಿಇಒ ಜಿ.ಪ್ರಭು, ‘ಆಶ್ರಯ ಯೋಜನೆಯಲ್ಲಿ ನಿವೇಶನ ನೀಡಲು ಸಿದ್ಧತೆ ನಡೆದಿದ್ದು, ಶಿರಾ ತಾಲ್ಲೂಕಿನಲ್ಲಿ ವಿತರಿಸಲು 1,500 ಹಕ್ಕು ಪತ್ರಗಳು ಸಿದ್ಧವಾಗಿವೆ’ ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ದತ್ತಾತ್ರೇಯ ಗಾದ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.