ತುಮಕೂರು: ವಾಗ್ವಾದ ನಡೆಸಿದ ಕಾರಣಕ್ಕೆ ಪಡಿತರ ವಿತರಕ ರಾಜು ಎಂಬುವರ ಮೇಲೆ ಸಂಚಾರಿ ಪೊಲೀಸರು ರಕ್ತ ಬರುವಂತೆ ಥಳಿಸಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಗರದ ಹೃದಯ ಭಾಗವಾದ ಟೌನ್‌ಹಾಲ್ ವೃತ್ತದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಲಾಕ್‌ಡೌನ್ ಇದ್ದರೂ ಓಡಾಡುತ್ತಿದ್ದ ಬಗ್ಗೆ ಪೊಲೀಸರು ಪ್ರಶ್ನಿಸಿದ್ದು, ಆಗ ವಾಗ್ವಾದ ನಡೆಸಿದರು ಎನ್ನಲಾಗಿದೆ.
ಪರಸ್ಪರ ಮಾತಿಗೆ ಮಾತು ಬೆಳೆದಿದ್ದು, ಸಿಟ್ಟಿಗೆದ್ದ ಪೊಲೀಸರು ಲಾಠಿಯಿಂದ ಚೆನ್ನಾಗಿ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ತಳ್ಳಾಟ ನಡೆದು, ರಾಜು ಮೂಗಿನಿಂದ ರಕ್ತ ಸುರಿದಿದೆ. ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವ್ಯಕ್ತಿಗೂ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಸಾರ್ವಜನಿಕರ ಆಕ್ರೋಶ: ವ್ಯಕ್ತಿಗೆ ರಕ್ತ ಬರುವಂತೆ ಥಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಇದನ್ನು ವೀಕ್ಷಿಸಿದ ಸಾರ್ವಜನಿಕರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ರಮ: ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.