ADVERTISEMENT

ಪ್ರಸವ ಪೂರ್ವ ಲಿಂಗಪತ್ತೆ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಕಾಯ್ದೆ ಅನುಷ್ಠಾನದ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2019, 12:56 IST
Last Updated 29 ಏಪ್ರಿಲ್ 2019, 12:56 IST
ಡಾ.ಕೆ.ರಾಕೇಶ್‌ಕುಮಾರ್
ಡಾ.ಕೆ.ರಾಕೇಶ್‌ಕುಮಾರ್   

ತುಮಕೂರು: ಜಿಲ್ಲೆಯಲ್ಲಿರುವ ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪರಿಶೀಲಿಸಿ, ವಿಸ್ತೃತ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪ್ರಸವ ಪೂರ್ವ ಲಿಂಗಪತ್ತೆ ಕಾಯ್ದೆ ಅನುಷ್ಠಾನದ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಯ್ದೆ ನಿಯಮಗಳನ್ವಯ ಕಾರ್ಯ ನಿರ್ವಹಿಸದ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಕಳೆದ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಮಕ್ಕಳ ಜನನ ಲಿಂಗಾನುಪಾತ ಪ್ರಮಾಣದಲ್ಲಿ ಇಳಿಮುಖವಾಗಿದೆ. ಇದಕ್ಕೆ ಸ್ಪಷ್ಟವಾದ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಅಲ್ಲದೆ ಜಿಲ್ಲೆಯಲ್ಲಿರುವ ಎಲ್ಲ ಸ್ಕ್ಯಾನಿಂಗ್ ಕೇಂದ್ರಗಳಿಗೆ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯರು ಭೇಟಿ ನೀಡಿ, ಕಾಯ್ದೆಯ ಅನುಸಾರ ಸ್ಕ್ಯಾನಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆಯೇ, ಇಲ್ಲವೆ ಎಂಬುದನ್ನು ದಾಖಲೆಗಳೊಂದಿಗೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಅವರಿಗೆ ಸೂಚಿಸಿದರು.

ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ಫಾರಂ-ಎಫ್‌ ಅನ್ನು ಆರೋಗ್ಯ ಇಲಾಖೆಗೆ ಸಲ್ಲಿಸಬೇಕು. ಅಲ್ಲದೆ ದಾಖಲೆಗಳನ್ನು ಕಡ್ಡಾಯವಾಗಿ 2 ವರ್ಷ ರಕ್ಷಿಸಿಡುವಂತೆ ಕಾಯ್ದೆಯಲ್ಲಿ ತಿಳಿಸಲಾಗಿದೆ. ಕಾಯ್ದೆ ಉಲ್ಲಂಘಿಸಿರುವ ಸ್ಕ್ಯಾನಿಂಗ್ ಕೇಂದ್ರಗಳ ಬಗ್ಗೆ ವರದಿ ನೀಡಿದರೆ, ಆ ಸ್ಕ್ಯಾನಿಂಗ್ ಕೇಂದ್ರಗಳ ಅನುಮತಿ ರದ್ದುಪಡಿಸಲಾಗುವುದು ಎಂದರು.

ಪಾವಗಡಕ್ಕೆ ಹೊರರಾಜ್ಯದಿಂದ ಅಕ್ರಮವಾಗಿ ಬಂದು ಸ್ಕ್ಯಾನಿಂಗ್ ಸೆಂಟರ್‌ಗಳ ಮೂಲಕ ಹೆಣ್ಣು ಭ್ರೂಣ ಪತ್ತೆ ಮಾಡಿಸುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳಲು ರಾಜ್ಯ ಸಕ್ಷಮ ಪ್ರಾಧಿಕಾರವು ಪತ್ರ ಬರೆದಿರುವ ಬಗ್ಗೆ ಡಿಎಚ್‌ಒ ಸಭೆಯ ಗಮನಕ್ಕೆ ತಂದರು. ಪಾವಗಡದಲ್ಲಿರುವ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಸ್ಕ್ಯಾನಿಂಗ್ ಮಾಡಿಸುವ ಪ್ರತಿಯೊಬ್ಬ ಗರ್ಭಿಣಿಯರ ಮಾಹಿತಿ ಪಡೆದು ಪರಿಶೀಲಿಸಬೇಕು.

ನೆರೆಯ ಆಂಧ್ರಪ್ರದೇಶದ ಅನಂತಪುರ ಜಿಲ್ಲಾಧಿಕಾರಿಗೆ ಈ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡುವಂತೆ ಪತ್ರ ಬರೆಯೋಣ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಡಾ.ಬಸವರಾಜ್, ಡಾ.ಭರತ್, ಡಾ,ನಳಿನಾ, ವಿಜಯ ಹಾಗೂ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.