ADVERTISEMENT

ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ಹೊಣೆ: ತುಳಸಿ ಮದ್ದಿನೇನಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 5:58 IST
Last Updated 20 ಜುಲೈ 2024, 5:58 IST

ತುಮಕೂರು: ಶಾಲೆಯಲ್ಲಿ ಮಕ್ಕಳು ಕನ್ನಡ ಅಕ್ಷರ ಗುರುತಿಸಲು ಕಷ್ಟ ಪಡುತ್ತಿದ್ದಾರೆ. ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರನ್ನೇ ನೇರ ಹೊಣೆ ಮಾಡಿ ಅವರ ವೇತನ ಬಡ್ತಿ ಕಡಿತಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಎಚ್ಚರಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದರು. ಶಾಲೆಗಳಿಗೆ ಭೇಟಿ ನೀಡಿದಾಗ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡು ಬಂದಿದೆ. ಅಧಿಕಾರಿಗಳು ಸಭೆಗಳಿಗೆ ಸಮಯ ವ್ಯರ್ಥ ಮಾಡದೆ ಶಾಲೆಗೆ ಭೇಟಿ ನೀಡಿ ಪರಿಶೀಲಿಸಬೇಕು. ಮಕ್ಕಳಿಗೆ ಸೌಲಭ್ಯ ಕಲ್ಪಿಸುವುದರ ಜತೆಗೆ ಮೌಲ್ಯಯುತ ಶಿಕ್ಷಣ ನೀಡಬೇಕು ಎಂದು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ವಾರದಲ್ಲಿ 5 ದಿನ ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಓದಿನಲ್ಲಿ ಹಿಂದುಳಿದ ಮಕ್ಕಳತ್ತ ವಿಶೇಷ ಗಮನ ಹರಿಸಬೇಕು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸಲು ಶ್ರಮಿಸಬೇಕು ಎಂದರು.

ADVERTISEMENT

ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ತೆರೆದಿದ್ದ ಬ್ಯಾಂಕ್ ಖಾತೆಗಳು ಯೋಜನೆ ಮುಕ್ತಾಯಗೊಂಡ ನಂತರವೂ ಚಾಲ್ತಿಯಲ್ಲಿದ್ದು, ಜುಲೈ 31ರ ಒಳಗೆ ಖಾತೆ ರದ್ದುಪಡಿಸಿ ವರದಿ ಸಲ್ಲಿಸಬೇಕು. ಜನ ಸ್ಪಂದನ ಕಾರ್ಯಕ್ರಮಗಳಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಕೇವಲ ಹಿಂಬರಹ ನೀಡಿ ಸುಮ್ಮನಾಗದೆ ಪರಿಹಾರ ಒದಗಿಸಬೇಕು ಎಂದು ನಿರ್ದೇಶಿಸಿದರು.

‘ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗುತ್ತಿಲ್ಲ’ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಇದರಿಂದ ಜನರ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಎಲ್ಲ ಇಲಾಖೆಯಲ್ಲಿ ಬಯೊ ಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಬೇಕು. ವಿದ್ಯಾರ್ಥಿ ವೇತನ ಸಕಾಲಕ್ಕೆ ಬಿಡುಗಡೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.