ADVERTISEMENT

ಶಿಕ್ಷಕರಿಂದ ಚಾಕರಿ ಕೆಲಸ ಮಾಡಿಸದಿರಿ: ಶಾಸಕ ಬಿ.ಸುರೇಶ್‌ಗೌಡ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 3:09 IST
Last Updated 6 ಸೆಪ್ಟೆಂಬರ್ 2024, 3:09 IST
<div class="paragraphs"><p>ತುಮಕೂರಿನಲ್ಲಿ ಗುರುವಾರ&nbsp;ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು. </p></div>

ತುಮಕೂರಿನಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು.

   

ತುಮಕೂರು: ಶಾಲೆಯಲ್ಲಿ ಶಿಕ್ಷಕರಿಂದ ಚಾಕರಿ ಮಾಡಿಸುತ್ತಿದ್ದಾರೆ. ಬೋಧನೆಯ ಜತೆಗೆ ಬಿಸಿಯೂಟ, ಹಾಲು ವಿತರಣೆ, ಜನಗಣತಿ ಇತರೆ ನೂರೆಂಟು ಕೆಲಸಗಳ ಒತ್ತಡದಲ್ಲೇ ಶಿಕ್ಷಕರು ಬಡವಾಗುತ್ತಿದ್ದಾರೆ ಎಂದು ಶಾಸಕ ಬಿ.ಸುರೇಶ್‌ಗೌಡ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ADVERTISEMENT

ಮನೆಯಲ್ಲಿ ಅಪ್ಪ–ಅಮ್ಮ ಮಾಡಬೇಕಾದ ಕೆಲಸಗಳನ್ನು ಶಾಲೆಯಲ್ಲಿ ಶಿಕ್ಷಕರು ಮಾಡುತ್ತಿದ್ದಾರೆ. ಸರ್ಕಾರ ಶಿಕ್ಷಕರ ಸಮಸ್ಯೆ, ಸವಾಲುಗಳ ಬಗ್ಗೆ ಗಮನ ಹರಿಸಬೇಕು. ಶಿಕ್ಷಕರು ಮಕ್ಕಳಿಗೆ ವಿನಯ ಶೀಲತೆ, ಆತ್ಮವಿಶ್ವಾಸ, ಸಂಸ್ಕಾರ, ಗುರು–ಹಿರಿಯರನ್ನು ಗೌರವಿಸುವುದನ್ನು ಕಲಿಸಬೇಕು. ವಿದ್ಯಾರ್ಥಿಗಳು ಸೃಜನಶೀಲತೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಭಯ, ಒತ್ತಡದಿಂದ ಕೆಲಸ ಮಾಡಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿಲ್ಲ. ಸತತ ಪ್ರಯತ್ನ, ಪ್ರೀತಿ ಇರುವ ಕಡೆ ಯಶಸ್ಸು ಸುಲಭವಾಗುತ್ತದೆ. ಕೇವಲ ಅಂಕಗಳಿಂದ ಎಲ್ಲವೂ ಸಿಗುವುದಿಲ್ಲ. ಮಕ್ಕಳಿಗೆ ಉತ್ತಮ ನಡವಳಿಕೆ ಕಲಿಸಬೇಕು. ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ, ಪ್ರಾಮಾಣಿಕವಾಗಿ ಬದುಕುವ ಬಗ್ಗೆ ತಿಳಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳ ಮನಸ್ಸು ಅರ್ಥಮಾಡಿಕೊಳ್ಳಬೇಕು. ಭವ್ಯ ಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ತುಂಬಾ ಮುಖ್ಯವಾದದ್ದು, ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ರೂಪಿಸಬೇಕು ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ‘ಪಠ್ಯ ಪುಸ್ತಕ ಮಾತ್ರ ಓದುವುದು ಶಿಕ್ಷಣವಲ್ಲ. ಮಕ್ಕಳಲ್ಲಿ ಪತ್ರಿಕೆ, ಪುಸ್ತಕ ಓದುವ ಅಭ್ಯಾಸ ಮಾಡಿಸಬೇಕು. ಸಾಮಾಜಿಕ ಮೌಲ್ಯಗಳ ಬಗ್ಗೆ ಹೇಳಿಕೊಡಬೇಕು. ಶಿಕ್ಷಕರು ತುಂಬಾ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫಲಿತಾಂಶ ಸುಧಾರಣೆಗೆ ಶ್ರಮಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ‘ಶಿಕ್ಷಕರು ದೇಶದ ಅಭಿವೃದ್ಧಿಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ-ತಾಯಿ ನಂತರ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮಹತ್ವದ ಸ್ಥಾನ ಪಡೆದುಕೊಳ್ಳುವ ಶಕ್ತಿ ಶಿಕ್ಷಕರಿಗೆ ಮಾತ್ರ ಇದೆ. ಅತ್ಯಂತ ಹೆಚ್ಚು ಸರ್ಕಾರಿ ನೌಕರರನ್ನು ಶಿಕ್ಷಣ ಇಲಾಖೆ ಹೊಂದಿದೆ’ ಎಂದರು.

ತುಮಕೂರಿನಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು

ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್‌.ಕೆ.ಮನಮೋಹನ್‌, ಡಯಟ್‌ ಉಪನಿರ್ದೇಶಕ ಕೆ.ಮಂಜುನಾಥ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಶಿವಮೂರ್ತಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್‌, ಸಾವಿತ್ರಿ ಬಾಯಿ ಫುಲೆ ಸಂಘದ ಅಧ್ಯಕ್ಷೆ ಪಿ.ಎಸ್‌.ಅನಸೂಯದೇವಿ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.