ತುಮಕೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜನಪ್ರಿಯತೆ ಕಳೆದುಕೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ನಗರದ ಸಿದ್ಧಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ನಂತರ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಬಡವರ, ರೈತ ವಿರೋಧಿ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು. ಮುಂದಿನ ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಅದಕ್ಕಾಗಿ ಎಲ್ಲ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಬಿಜೆಪಿ ಅಧಿಕಾರಕ್ಕೆ ಅಂಟಿಕೊಂಡು ಕೂರುವ ಪಕ್ಷವಲ್ಲ. ಪಕ್ಷದ ಬೂತ್ ಸಮಿತಿ ಅಧ್ಯಕ್ಷರಿಗೆ ರಾಷ್ಟ್ರೀಯ ಅಧ್ಯಕ್ಷರಿಗೆ ಸಿಗುವ ಗೌರವ ದೊರೆಯುತ್ತದೆ. ಸಾಮಾನ್ಯ ಕಾರ್ಯಕರ್ತನೂ ಸಹ ಅಧಿಕಾರ ಪಡೆಯಲು ಸಾಧ್ಯವಾಗುತ್ತದೆ ಎಂದರು.
ತಾಲ್ಲೂಕಿನ ಗೂಳೂರು ಸಮೀಪದ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‍ಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಎಚ್.ಎಸ್.ರವಿಶಂಕರ್, ಬಿ.ಕೆ.ಮಂಜುನಾಥ್, ಮುಖಂಡರಾದ ಎಂ.ಪಿ.ರೇಣುಕಾಚಾರ್ಯ, ಮಸಾಲೆ ಜಯರಾಂ, ಪ್ರೀತಂಗೌಡ, ಡಾ.ಎಂ.ಆರ್.ಹುಲಿನಾಯ್ಕರ್, ಎಂ.ಡಿ.ಲಕ್ಷ್ಮಿನಾರಾಯಣ, ಸಿ.ಎಂ.ರಾಜೇಶ್‌ಗೌಡ, ಟಿ.ಆರ್.ಸದಾಶಿವಯ್ಯ ಇತರರು ಭಾಗವಹಿಸಿದ್ದರು.
ಮಾಜಿ ಶಾಸಕರ ಜೇಬಿಗೆ ಕೈ ಹಾಕಿದ ಕಳ್ಳ
ನಗರದ ಸಿದ್ಧಗಂಗಾ ಮಠದಲ್ಲಿ ಮಾಜಿ ಶಾಸಕ ಮಸಾಲೆ ಜಯರಾಂ ಜೇಬಿಗೆ ಕೈ ಹಾಕಿ ಹಣ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ವಶಕ್ಕೆ ಪಡೆದರು. ಹಣ ಕದಿಯುತ್ತಿದ್ದಾಗ ಜಯರಾಂ ಹಿಂಬಾಲಕರು ಗಮನಿಸಿ ಕಳ್ಳನನ್ನು ಹಿಡಿದಿದ್ದಾರೆ. ಸ್ಥಳದಲ್ಲಿದ್ದ ಕಾರ್ಯಕರ್ತರು ಕಳ್ಳನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.