ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಷ್ಕರ ನಡೆಸಿದ್ದರು. ಸರ್ಕಾರದ ಕಡೆಯಿಂದ ಸ್ಪಷ್ಟ ಭರವಸೆ ಸಿಗದೆ, ಬೇಡಿಕೆ ಈಡೇರದ ಕಾರಣ ಜಿಲ್ಲಾ ಮಟ್ಟದಲ್ಲಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಅದರಂತೆ ಜಿಲ್ಲಾ ಕೇಂದ್ರದಲ್ಲಿ ಮುಷ್ಕರ ನಡೆಸುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು, ಡಾಟಾ ಎಂಟ್ರಿ ಅಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ.
ಬೆಂಗಳೂರಿನಲ್ಲಿ ಅ. 10ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸ್ಪಷ್ಟ ಭರವಸೆ ಸಿಕ್ಕಿದರೆ, ಬೇಡಿಕೆ ಈಡೇರಿಸಲು ಒಪ್ಪಿಕೊಂಡರೆ ಮಾತ್ರ ಮುಷ್ಕರ ಕೈಬಿಡಲಾಗುತ್ತದೆ. ಇಲ್ಲವಾದರೆ ಮುಂದುವರಿಸಲಾಗುತ್ತದೆ. ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮುಷ್ಕರ ಮುಂದುವರಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನೌಕರರು ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಗ್ರಾ.ಪಂ ಆಡಳಿತ ಬಹುತೇಕ ಸ್ಥಗಿತಗೊಂಡಿದ್ದು, ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳತ್ತ ಅಲೆಯುವಂತಾಗಿದೆ. ಮುಷ್ಕರ ಮುಂದುವರಿದರೆ ಗ್ರಾಮ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿಯಲಿದೆ ಎಂಬ ಆತಂಕ ವ್ಯಕ್ತವಾಗಿದೆ.
ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‍ಗೌಡ ಬೆಂಬಲ ವ್ಯಕ್ತಪಡಿಸಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜು, ಗ್ರಾ.ಪಂ ಸದಸ್ಯರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡೇರಿ ವಿಜಯಕುಮಾರ್, ಗ್ರಾ.ಪಂ ಕಾರ್ಯದರ್ಶಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಎಸ್‍ಡಿಸಿಗಳ ಸಂಘದ ಅಧ್ಯಕ್ಷ ಶಾಹಿದ್ ಅಫ್ರಿದಿ ಇತರರು ಪಾಲ್ಗೊಂಡಿದ್ದರು.
* ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸಬೇಕು.
* ಏಳು ವರ್ಷ ಕರ್ತವ್ಯ ನಿರ್ವಹಿಸಿದ ಪಿಡಿಒಗಳನ್ನು ಬೇರೆ ತಾಲ್ಲೂಕಿಗೆ ವರ್ಗಾವಣೆ ಮಾಡುವ ನಿಯಮ ಕೈ ಬಿಡಬೇಕು.
* ಪಿಡಿಒಗಳ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ, ಬಡ್ತಿ ನೀಡಬೇಕು.
* ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನ ಗುರಿ ನಿಗದಿ ಕೈ ಬಿಸಬೇಕು. ಈಗಾಗಲೇ ಹಿಂಪಡೆಯಲಾಗಿರುವ ನರೇಗಾಕ್ಕೆ ಸಂಬಂಧಿಸಿದ ಲೋಕಾಯುಕ್ತ ಪ್ರಕರಣಗಳನ್ನು ಶಾಶ್ವತವಾಗಿ ಮುಕ್ತಾಯಗೊಳಿಸಬೇಕು.
* ಅವಶ್ಯಕತೆ ಇಲ್ಲದ ಕಡೆಗಳಲ್ಲಿ ಕೂಸಿನ ಮನೆ ಸ್ಥಗಿತಗೊಳಿಸಬೇಕು.
* ಕುಂದುಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆಯ ಮಾದರಿಯಲ್ಲಿ ಸದೃಢಗೊಳಿಸಬೇಕು.
* ಏಕರೂಪ ಆಡಿಟ್ ಪದ್ಧತಿ ಜಾರಿಗೊಳಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.