ADVERTISEMENT

ಕೊರಟಗೆರೆ 62 ಕೆರೆಗೆ ನೀರು

₹285 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 16:51 IST
Last Updated 26 ಜುಲೈ 2024, 16:51 IST
ಕೊರಟಗೆರೆ ತಾಲ್ಲೂಕಿನಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ
ಕೊರಟಗೆರೆ ತಾಲ್ಲೂಕಿನಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ   

ತುಮಕೂರು: ಎತ್ತಿನಹೊಳೆ ಯೋಜನೆಯಲ್ಲಿ ಕೊರಟಗೆರೆ ತಾಲ್ಲೂಕಿನ 62 ಕೆರೆಗಳಿಗೆ ನೀರು ತುಂಬಿಸುವ ₹285 ಕೋಟಿ ಮೊತ್ತದ ಯೋಜನೆಗಳಿಗೆ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಎತ್ತಿನಹೊಳೆ ನೀರಾವರಿ ಯೋಜನೆಯಲ್ಲಿ ಮಧುಗಿರಿ ತಾಲ್ಲೂಕಿಗೆ ಹಾದು ಹೋಗುವ ನಾಲೆಯಿಂದ 62 ಕೆರೆಗಳಿಗೆ ನೀರು ಹರಿಸಲು ಉದ್ದೇಶಿಸಲಾಗಿದೆ. ಈ ಯೋಜನೆ ಸಾಕಾರಗೊಂಡರೆ ಕೊರಟಗೆರೆ ತಾಲ್ಲೂಕಿನ ಬಹುತೇಕ ಕೆರೆಗಳಿಗೆ ನೀರು ಲಭ್ಯವಾಗಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಎತ್ತಿನಹೊಳೆ ಯೋಜನೆಯ ಮುಖ್ಯ ನಾಲೆ ಕೊರಟಗೆರೆ ತಾಲ್ಲೂಕಿನಲ್ಲಿ ಹಾದು ಹೋಗಿದ್ದು, ಮುಂದೆ ಗೌರಿಬಿದನೂರು ತಾಲ್ಲೂಕಿನತ್ತ ಸಾಗಲಿದೆ. ಇಲ್ಲಿಂದ ಒಂದು ನಾಲೆ ಮಧುಗಿರಿಯತ್ತ ಹೋಗುತ್ತದೆ. ಈ ನಾಲೆಯಿಂದ ಪೈಪ್‌ಲೈನ್ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸಲು ಉದ್ದೇಶಿಸಲಾಗದೆ. 62 ಕೆರೆಗಳಲ್ಲಿ 47 ಕೆರೆಗಳಿಗೆ ಗುರುತ್ವಾಕರ್ಷಣೆ ಮೂಲಕ ಹಾಗೂ ಉಳಿದ 15 ಕೆರೆಗಳಿಗೆ ಪಂಪ್ ಮಾಡಿ ನೀರು ಹರಿಸಲು ಯೋಜನೆ ರೂಪಿಸಲಾಗಿದೆ.

ADVERTISEMENT

62 ಕೆರೆಗಳ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 2,198 ಎಂಸಿಎಫ್‌ಟಿ. ಎತ್ತಿನಹೊಳೆ ಯೋಜನೆಯಲ್ಲಿ ಕೊರಟಗೆರೆ ತಾಲ್ಲೂಕಿಗೆ 826 ಎಂಸಿಎಫ್‌ಟಿ ನೀರು ಹಂಚಿಕೆಯಾಗಿದ್ದು, ಇದನ್ನು ಬಳಸಿಕೊಂಡು ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಕೆರೆಗಳ ನೀರು ಸಂಗ್ರಹ ಸಾಮರ್ಥ್ಯದಲ್ಲಿ ಅರ್ಧದಷ್ಟು ಪ್ರಮಾಣದಲ್ಲಿ ನೀರು ತುಂಬಿಸಲು ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಕುಡಿಯುವ ನೀರಿಗೆ ಬಳಸಿಕೊಳ್ಳುವುದರ ಜತೆಗೆ ಅಂತರ್ಜಲ ಹೆಚ್ಚಳಕ್ಕೂ ಸಹಕಾರಿಯಾಗಲಿದೆ.

‘ಎತ್ತಿನಹೊಳೆ ಯೋಜನೆ ಕಾಮಗಾರಿ ಮುಗಿಯುತ್ತಾ ಬಂದಿದ್ದು, ಡಿಸೆಂಬರ್ ವೇಳೆಗೆ ನೀರು ಹರಿಸಲಾಗುತ್ತದೆ’ ಎಂದು ಕಳೆದ ಎರಡು ವರ್ಷದಿಂದ ರಾಜಕಾರಣಿಗಳು ಹೇಳಿಕೊಂಡು ಬರುತ್ತಿದ್ದಾರೆ. ಆದರೆ ಇದೇ ವೇಗದಲ್ಲಿ ಕಾಮಗಾರಿ ನಡೆದರೆ ಯೋಜನೆ ಪೂರ್ಣಗೊಂಡು ಜಿಲ್ಲೆಗೆ ನೀರು ಹರಿಸಲು ವರ್ಷಗಳೇ ತೆಗೆದುಕೊಳ್ಳುತ್ತದೆ. ಕೆಲಸ ಮತ್ತಷ್ಟು ವೇಗ ಪಡೆದುಕೊಂಡರೆ ಕನಿಷ್ಠ ಎರಡು ವರ್ಷದಲ್ಲಾದರೂ ನೀರು ಹರಿಸಬಹುದು. ಅಷ್ಟರಲ್ಲಿ ಕೆರೆಗಳಿಗೆ ನೀರು ತುಂಬಿಸಿಕೊಳ್ಳುವ ಯೋಜನೆಯನ್ನು ಪೂರ್ಣಗೊಳಿಸಬೇಕಿದೆ.

ಮಳೆ ಕೊರತೆಯಿಂದಾಗಿ ಕಳೆದ ಒಂದು ದಶಕದಿಂದ ಕೊರಟಗೆರೆ ತಾಲ್ಲೂಕಿನ ಕೆರೆಗಳಿಗೆ ನೀರು ಹರಿದು ಬಂದಿಲ್ಲ. ಅಂತರ್ಜಲದ ಮಟ್ಟ 1 ಸಾವಿರದಿಂದ 1,200 ಅಡಿಗಳ ವರೆಗೆ ಕುಸಿದಿದೆ. ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಬೇಸಿಗೆಯಲ್ಲಿ ತೀವ್ರ ಸಮಸ್ಯೆ ಎದುರಿಸಬೇಕಾಗಿದೆ. ಹಾಗಾಗಿ ಎತ್ತಿನಹೊಳೆ ಯೋಜನೆಯಲ್ಲಿ ಕೆರೆಗಳನ್ನು ತುಂಬಿಸಲು ಉದ್ದೇಶಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.