ADVERTISEMENT

ತೆರಿಗೆ ಹಣ ಎಲ್ಲಿಗೆ ಹೋಗುತ್ತಿದೆ: ವಿಜಯೇಂದ್ರ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 15:36 IST
Last Updated 18 ಜೂನ್ 2024, 15:36 IST
 ಬಿ.ವೈ.ವಿಜಯೇಂದ್ರ 
 ಬಿ.ವೈ.ವಿಜಯೇಂದ್ರ    

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ತೆರಿಗೆ ಹೆಚ್ಚಳ ಮಾಡಿ ಸಂಗ್ರಹಿಸಿದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರದಿಂದ ಅನುದಾನ ಬಂದಿಲ್ಲ, ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪದೇಪದೇ ಹೇಳುತ್ತಿದ್ದೀರಿ. ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುತ್ತಿದ್ದೀರಿ. ಹಾಗಾದರೆ ರಾಜ್ಯದಲ್ಲಿ ಸಂಗ್ರಹಿಸಿದ ತೆರಿಗೆ ಹಣವನ್ನು ಯಾವ ಉದ್ದೇಶಕ್ಕೆ ಬಳಸುತ್ತಿದ್ದೀರಿ’ ಎಂದು ಕೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಲು ಮತ್ತು ವಿದ್ಯುತ್ ದರ, ಅಬಕಾರಿ ತೆರಿಗೆ, ಮುದ್ರಾಂಕ ಶುಲ್ಕ ಹೆಚ್ಚಳ ಮಾಡಲಾಯಿತು. ಈಗ ತೈಲ ದರ ಏರಿಸಲಾಗಿದೆ. ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ತೆರಿಗೆ ಹೆಚ್ಚಿಸಿ ಸಂಗ್ರಹಿಸಿದ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಸದೆ ಲೂಟಿ ಹೊಡೆಯುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ADVERTISEMENT

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತಗೊಂಡಿವೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ಜನರ ಮೇಲೆ ಅನಗತ್ಯವಾಗಿ ತೆರಿಗೆ ಭಾರ ಹೊರಿಸಲಾಗುತ್ತಿದೆ. ಸಿದ್ದರಾಮಯ್ಯ ಉಡಾಫೆ ಉತ್ತರ ನೀಡುವುದನ್ನು ಬಿಟ್ಟು ತೈಲ ಬೆಲೆ ಇಳಿಸಬೇಕು. ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವುದು ನೋಡಿದರೆ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಗೊತ್ತಾಗುತ್ತದೆ. ಇಂತಹ ಸ್ಥಿತಿಯಲ್ಲಿ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ಯಾವ ನೈತಿಕತೆ ಇದೆ? ನಮ್ಮ ಕಡೆಗೆ ಬೆರಳು ತೋರಿಸುವ ನೀವು ಏನು ಕಡಿದು ಕಟ್ಟೆ ಹಾಕುತ್ತಿದ್ದೀರಿ’ ಎಂದು ಕೇಳಿದರು.

20ಕ್ಕೆ ರಸ್ತೆ ತಡೆ ಚಳವಳಿ

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಜೂನ್ 20ರಂದು ರಾಜ್ಯದಾದ್ಯಂತ ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು. ತೈಲ ಬೆಲೆ ಏರಿಕೆ ವಿರೋಧಿಸಿ ಸೋಮವಾರ ಪ್ರತಿಭಟನೆ ಮಾಡಲಾಗಿದೆ. ಭಂಡ ಸರ್ಕಾರ ತೆರಿಗೆ ಹೊರೆ ಇಳಿಸುವಂತೆ ಕಾಣುತ್ತಿಲ್ಲ. ಹಾಗಾಗಿ ಹೋರಾಟ ಮುಂದುವರಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.