ಕೋಟ(ಬ್ರಹ್ಮಾವರ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಬ್ರಹ್ಮಾವರ ಹಾಗೂ ಕೋಟತಟ್ಟು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೊ ಬೇಟಿ ಪಡಾವೊ ಕಾರ್ಯಕ್ರಮ ಕೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣೆ, ಹಾಗೂ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕೋಟ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ, ಹೆಣ್ಣು ಸಮಾಜದಲ್ಲಿ ಎಷ್ಟು ಮುಖ್ಯ ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಅವರ ಕಾರ್ಯನಿರ್ವಹಣೆಯ ಕುರಿತು ಮಾಹಿತಿ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಮಾತನಾಡಿ, ಹೆಣ್ಣು ಮಕ್ಕಳಿಗೆ ಸೂಕ್ತ ಶಿಕ್ಷಣ ನೀಡಿದಲ್ಲಿ ಎತ್ತರಕ್ಕೆ ಬೆಳೆಯ ಬಲ್ಲಳು ಎನ್ನುವುದನ್ನು ಮನಗಾಣಿಸಿದರು.
ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಕುಂದರ್ ಬಾರಿಕೆರೆ, ಹೆಣ್ಣು ಸಮಾಜದ ಮತ್ತು ದೇಶದ ಅಭಿವೃದ್ಧಿಗೆ ಹೇಗೆ ಕೊಡುಗೆ ನೀಡಬಲ್ಲಳು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಬಂದಿದ್ದ ಸುಮಂಗಲ, ಮಕ್ಕಳಿಗೆ ಮತ್ತು ಪೋಷಕರಿಗೆ ಸರ್ಕಾರದ ಯೋಜನೆಯ ಉದ್ದೇಶ, ಅದರ ಕಾರ್ಯ ವ್ಯಾಪ್ತಿಯ ಬಗ್ಗೆ ಮಾಹಿತಿ ನೀಡಿದರು.
ಹೆಣ್ಣು ಮಕ್ಕಳನ್ನು ಹೆತ್ತವರು ‘ನಾನು ನನ್ನ ಕನಸು ಸೆಲ್ಫಿ ಸ್ಟಾಂಡ್’ ಜೊತೆ ಫೋಟೊ ಕ್ಲಿಕ್ಕಿಸಿ ಸಂಭ್ರಮಿಸಿದರು. ಪಂಚಾಯಿತಿ ಸದಸ್ಯರಾದ ವಾಸು ಪೂಜಾರಿ, ಜ್ಯೋತಿ, ಅಶ್ವಿನಿ ದಿನೇಶ್, ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾವತಿ ಹೊಳ್ಳ, ಕೋಟತಟ್ಟು ಅಂಗನವಾಡಿ ಕಾರ್ಯಕರ್ತರು, ಶಾಲಾ ಸಿಬ್ಬಂದಿ, ಮಕ್ಕಳು ಹಾಗೂ ಪೋಷಕರು ಇದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಲಯ ಮೇಲ್ವಿಚಾರಕಿ ಮೀನಾಕ್ಷಿ ಸ್ವಾಗತಿಸಿದರು. ಕೋಟ ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.