ADVERTISEMENT

ಬೇಡಿಕೆ ಈಡೇರಿಸದಿದ್ದರೆ ಸದನದೊಳಗೂ ಪ್ರತಿಭಟನೆ: ಶಾಸಕ ಯಶ್‌ಪಾಲ್‌ ಸುವರ್ಣ

ಬಿಜೆಪಿ ರೈತ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 13:45 IST
Last Updated 26 ಜೂನ್ 2024, 13:45 IST
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ನೂಕಾಟ, ತಳ್ಳಾಟ ನಡೆಸಿದರು
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ನೂಕಾಟ, ತಳ್ಳಾಟ ನಡೆಸಿದರು   

ಉಡುಪಿ: ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸಬೇಕು, ಹೈನುಗಾರರಿಗೆ ಹಾಲಿನ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆಗೊಳಿಸಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸಭೆ ಒಳಗೂ ಹೊರಗೂ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕ, ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬಿತ್ತನೆ ಬೀಜ ದರ ಏರಿಕೆ ಮೂಲಕ ರೈತರ ಜೀವನದ ಜೊತೆ ಚೆಲ್ಲಾಟ ಆಡಬೇಡಿ ಎಂದ ಅವರು, ರೈತರ ಮತ್ತು ಹೈನುಗಾರರ ಬೇಡಿಕೆಗಳನ್ನು ಈಡೇರಿಸದಿದ್ದರೆ 50 ಗೋವುಗಳನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಟ್ಟುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ರೈತರ ಏಳಿಗೆಗಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ರಾಜ್ಯ ಸರ್ಕಾರ ಅನ್ನದಾತನ ಕಿಸೆಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ತೈಲ ಬೆಲೆ ಏರಿಕೆಯಿಂದ ಕೃಷಿ ಯಂತ್ರೋಪಕರಣಗಳನ್ನು ಬಳಸುವ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದರು.

ರೈತ ಮೋರ್ಚಾದ ರಾಜ್ಯ ಘಟಕ ಕಾರ್ಯದರ್ಶಿ ನವೀನ್ ಕುಮಾರ್ ಮಾತನಾಡಿ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿತ್ತು. ರಾಜ್ಯದಲ್ಲಿ ಒಂದು ವರ್ಷದಲ್ಲಿ 824 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ 300 ಮಂದಿಗೆ ಮಾತ್ರ ಪರಿಹಾರ ನೀಡಲಾಗಿದೆ. ಉಳಿದವರಿಗೆ ಯಾಕೆ ಕೊಟ್ಟಿಲ್ಲ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಯಶ್‌ಪಾಲ್‌ ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಕೊಡ್ತೀವಿ ಅಂತ ಘೋಷಿಸುತ್ತಾರೆ, ಆದರೆ ರೈತರ ಬಗ್ಗೆ ಯಾಕೆ ಈ ನಿರ್ಲಿಪ್ತ ಭಾವ ಎಂದು ಅವರು ಪ್ರಶ್ನಿಸಿದರು. ರೈತರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತರಲು ಹೊರಟಾಗ ಅದನ್ನು ತಡೆಯುವ ಮೂಲಕ ರಾಜ್ಯ ಸರ್ಕಾರ ದಳ್ಳಾಳಿಗಳ ಪರ ಇದೆ ಎಂಬುದನ್ನು ಸಾಬೀತು ಮಾಡಿದೆ ಎಂದು ಆರೋಪಿಸಿದರು.

ಈ ಬಾರಿ ಹಿಂದುಳಿದ ವರ್ಗಗಳ 5 ಲಕ್ಷ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಲಭ್ಯ ಸಿಕ್ಕಿಲ್ಲ. ಹಿಂದುಳಿದ ವರ್ಗದವರ ಮೇಲೆ ಸರ್ಕಾರಕ್ಕಿರುವ ಕಾಳಜಿ ಇದೇನಾ ಎಂದೂ ಶಾಸಕ ಪ್ರಶ್ನಿಸಿದರು.

ಬಿಜೆಪಿ ಉಡುಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಮಾತನಾಡಿ, ಕರಾವಳಿಯಲ್ಲಿ ಕೃಷಿ ಕಾಲೇಜು ಆರಂಭಿಸಬೇಕು, ಕುಮ್ಕಿ ಮತ್ತು ಅಕ್ರಮ–ಸಕ್ರಮ ಸಮಿತಿಗಳನ್ನು ರಚನೆ ಮಾಡಿ, ಆ ಮೂಲಕ ರೈತರಿಗೆ ಶಾಶ್ವತ ಪಹಣಿ ಪತ್ರ ನೀಡಬೇಕು ಎಂದು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಬಿತ್ತನೆ ಬೀಜವನ್ನು ಸಾಕಷ್ಟು ದಾಸ್ತಾನು ಇರಿಸಿಕೊಂಡು ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸಬೇಕು ಎಂದು ಒತ್ತಾಯಿಸಿದರು.

ದನ, ಕೋಣಗಳನ್ನು ಪ್ರತಿಭಟನಾ ಸ್ಥಳಕ್ಕೆ ಕರೆತರುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟಿಸಲಾಯಿತು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಕುಯಿಲಾಡಿ ಸುರೇಶ್‌ ನಾಯಕ್‌, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ ಇದ್ದರು.

ಬಿಜೆಪಿ ಕಾರ್ಯಕರ್ತರು ದನಗಳೊಂದಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಕಾರ್ಯಕರ್ತರು ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಜಿಲ್ಲಾಧಿಕಾರಿ ಕಚೇರಿ ಗೇಟ್‌ ಬಳಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ನೂಕಾಟ ತಳ್ಳಾಟ ನಡೆಯಿತು. ಬಳಿಕ ಯಶ್‌ಪಾಲ್‌ ಸುವರ್ಣ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.