ಉಡುಪಿ: ‘ಸರ್ಕಾರದ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅರ್ಜಿ ಸಲ್ಲಿಸಿದಾಗ ನಿಯಮಾನುಸಾರ ಪಾರದರ್ಶಕವಾಗಿ, ತ್ವರಿತವಾಗಿ ವಿಲೇವಾರಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಹಾಜರಿರಬೇಕು, ಕಾಲಮಿತಿಯೊಳಗೆ ಕಡತಗಳನ್ನು ಇತ್ಯರ್ಥಗೊಳಿಸಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು’ ಎಂದು ನಿರ್ದೇಶನ ನೀಡಿದರು.
ಡೀಮ್ಡ್ ಫಾರೆಸ್ಟ್‌ನಿಂದ ವಿನಾಯಿತಿಗೊಂಡ ಜಮೀನನ್ನು ಕಂದಾಯ ಹಾಗೂ ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೆ ನಡೆಸಿ ಅರಣ್ಯದಿಂದ ಬೇರ್ಪಡಿಸಿ ಸಾರ್ವಜನಿಕ ಉಪಯೋಗಿ ಕಾರ್ಯಗಳಿಗೆ ಸರ್ಕಾರಿ ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಬಳಸಬೇಕು ಎಂದು ಸೂಚನೆ ನೀಡಿದರು.
ಈ ಬಾರಿ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗಿ, ಬಳಿಕ ಉತ್ತಮ ಮಳೆಯಾಗಿದ್ದರಿಂದ ಸಮಸ್ಯೆ ನಿವಾರಣೆಯಾಗಿದೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಮಳೆ ನೀರನ್ನು ಇಂಗಿಸುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ರಸಗೊಬ್ಬರದ ದಾಸ್ತಾನು ಸಾಕಷ್ಟಿರಬೇಕು, ಪರಿಸರದಲ್ಲಿನ ಹೆಚ್ಚಿನ ತೇವಾಂಶದಿಂದ ಅಡಿಕೆ ಬೆಳೆಯಲ್ಲಿ ಕೊಳೆರೋಗ ಹಾಗೂ ಹಳದಿ ಎಲೆ ಚುಕ್ಕಿ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿದ್ದು ಅಗತ್ಯ ಔಷಧೋಪಚಾರಕ್ಕೆ ಕ್ರಮ ವಹಿಸಬೇಕು.
ಅರಣ್ಯ ಇಲಾಖೆ ವತಿಯಿಂದ ರಸ್ತೆ ಬದಿಯಲ್ಲಿರುವ, ಜನನಿಬೀಡ ಪ್ರದೇಶಗಳಲ್ಲಿರುವ ಅಪಾಯಕಾರಿ ಮರಗಳನ್ನು ಗುರುತಿಸಿ ತೆರವುಗೊಳಿಸಬೇಕು, ಪ್ರಸ್ತುತ ಸಾಲಿನಲ್ಲಿ ಗಿಡಮರಗಳನ್ನು ಬೆಳೆಸಲು ನಿಗದಿಪಡಿಸಿರುವ ಗುರಿ ಮುಟ್ಟಬೇಕು ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಮಳೆ ಗಾಳಿಯಿಂದ ವಿದ್ಯುತ್ ಕಂಬಗಳು ಉರುಳಿ ವಿದ್ಯುತ್ ಸಂಪರ್ಕ ಕಡಿತವಾದರೆ ಕೂಡಲೇ ಮರು ಸಂಪರ್ಕ ನೀಡಬೇಕು, ವಿದ್ಯುತ್ ಮಾರ್ಗಗಳಿಗೆ ಅಡಚಣೆ ಉಂಟು ಮಾಡುವ ಮರದ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯ ನಡೆಯಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 27ಕ್ಕೂ ಹೆಚ್ಚು ಅಂಗನವಾಡಿ ಕಟ್ಟಡಗಳಿಗೆ ಜಾಗದ ಕೊರತೆಯಿದ್ದು ಸ್ವಂತ ಕಟ್ಟಡ ಇಲ್ಲ. ಸ್ಥಳೀಯವಾಗಿ ದಾನಿಗಳನ್ನು ಸಂಪರ್ಕಿಸಿ, ಅಗತ್ಯ ಜಾಗ ಪಡೆದು ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಬೇಕು, ಚೆಕ್ ಡ್ಯಾಂಗಳ ನಿರ್ವಹಣೆ ಕೊರತೆಯಿಂದ ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗುತ್ತಿದ್ದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಪ್ರಸನ್ನ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಇದ್ದರು.
ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯದಂತೆ ಎಚ್ಚರವಹಿಸಿ ಗೋವಾ ರಾಜ್ಯದ ಮೂಲಕ ಜಿಲ್ಲೆಗೆ ಅಕ್ರಮ ಮದ್ಯ ಸರಬರಾಜು ಆಗದಂತೆ ತಡೆದರೆ ಅಬಕಾರಿ ಆದಾಯ ಹೆಚ್ಚಾಗಲಿದೆ.ಡಾ.ಕೆ.ವಿದ್ಯಾಕುಮಾರಿ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.