ADVERTISEMENT

ಕ್ರೀಡೆಯಿಂದ ಉತ್ತಮ ಆರೋಗ್ಯ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 5:50 IST
Last Updated 23 ಅಕ್ಟೋಬರ್ 2024, 5:50 IST
ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು
ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು   

ಉಡುಪಿ: ‘ಒತ್ತಡದ ನಡುವೆಯೂ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ’ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಅವಿನಾಶ್ ಶೆಟ್ಟಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಧ್ವಜಾರೋಹಣ ನೆರವೇರಿಸಿದರು.

ADVERTISEMENT

ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್ ನೇತೃತ್ವದಲ್ಲಿ ವಿವಿಧ ತಾಲ್ಲೂಕು ಸಂಘಗಳ ಸದಸ್ಯರಿಂದ ಪಥ ಸಂಚಲನ ನಡೆಯಿತು. ರಜತ ಮಹೋತ್ಸವ ಸಮಿತಿಯ ಕ್ರೀಡಾ ಸಂಚಾಲಕ ರಾಜು ಖಾರ್ವಿ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸಲಾಯಿತು. ಕ್ರೀಡಾಜ್ಯೋತಿಯನ್ನು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ, ಉದ್ಯಮಿ ಆನಂದ ಪಿ. ಸುವರ್ಣ, ಮಣಿಪಾಲ ಮಾಹೆಯ ಕ್ರೀಡಾ ಕಾರ್ಯದರ್ಶಿ ವಿನೋದ್ ನಾಯಕ್ ಭಾಗವಹಿಸಿದ್ದರು. ಕ್ರೀಡಾಕೂಟಕ್ಕೆ ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಚಾಲನೆ ನೀಡಿದರು.

ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಶರೀಫ್ ಕಾರ್ಕಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಕೆ.ಸಿ.ರಾಜೇಶ್ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಓಟ, ರಿಲೆ, ಹಗ್ಗಜಗ್ಗಾಟ, ಮಡಕೆ ಒಡೆಯುವುದು ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.