ADVERTISEMENT

ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ: ಕೋಟ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 13:52 IST
Last Updated 21 ಜೂನ್ 2024, 13:52 IST
ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು
ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು   

ಉಡುಪಿ: ‘ಭಾರತ ದೇಶವು ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಸುಮಾರು ಐದು ಸಾವಿರ ವರ್ಷಗಳ ಹಿಂದೆ ದೇಶದಲ್ಲಿ ಆರಂಭಗೊಂಡ ಯೋಗವು ಇಂದು 193ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಿದ್ಧಿ ಪಡೆದಿದೆ’ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ನಗರದ ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಅಜ್ಜರಕಾಡು ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೈನಂದಿನ ಜೀವನ ಶೈಲಿಯಲ್ಲಿ ಯೋಗವು ಬಹುಮುಖ್ಯ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರೂ ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ವೃದ್ಧಿಗಾಗಿ ಯೋಗವನ್ನು ರೂಢಿಸಿಕೊಂಡು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ADVERTISEMENT

ಶಾಸಕ ಯಶ್‌ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಮಾತನಾಡಿದರು.

ಸಭಾ ಕಾರ್ಯಕ್ರಮದ ನಂತರ 45 ನಿಮಿಷಗಳ ಯೋಗದ ಪ್ರಾತ್ಯಕ್ಷಿಕೆ ನಡೆಯಿತು. ಯೋಗ ತರಬೇತುದಾರರಾದ ಚೆನ್ನಮ್ಮ ಉಡುಪ ಹಾಗೂ ಶೋಭಾ ಶೆಟ್ಟಿ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ವೀಣಾ ಕಾರಂತ್ ನಿರೂಪಿಸಿದರು. ವೈದ್ಯಾಧಿಕಾರಿ ಡಾ. ನಾಗರಾಜ್ ಕೌಲಗಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.