ಉಡುಪಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಶುಕ್ರವಾರ ಉಡುಪಿಯ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಸಮಸ್ಯೆಗಳ ಕುರಿತು ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನ್ಯಾಯಾಧೀಶರು ಔಷಧಾಲಯ, ಪ್ರಯೋಗಾಲಯ ಹಾಗೂ ವಾರ್ಡ್‌ಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಆಸ್ಪತ್ರೆಯ ಸೌಲಭ್ಯಗಳ ಕುರಿತು ನ್ಯಾಯಾಧೀಶರಿಗೆ ಮಾಹಿತಿ ನೀಡಿದರು.
ಬಳಿಕ ಮಾತನಾಡಿದ ನ್ಯಾಯಾಧೀಶರು ‘ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸೂಚನೆಯಂತೆ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಆಸ್ಪತ್ರೆಯ ಒಪಿಡಿ, ಜನರಲ್ ವಾರ್ಡ್, ಮಕ್ಕಳ ವಾರ್ಡ್, ಐಸಿಯುನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಆಸ್ಪತ್ರೆಯಲ್ಲಿ ಎಲ್ಲ ಸೌಲಭ್ಯಗಳಿವೆ ಎಂದು ತಿಳಿಸಿದರು.
ಕಟ್ಟಡ ನಿರ್ಮಾಣದಲ್ಲಿ ದೋಷವಿರುವಂತೆ ಕಾಣುತ್ತಿದ್ದು ಮಳೆ ನೀರು ಅಲ್ಲಲ್ಲಿ ಸೋರಿಕೆಯಾಗುತ್ತಿದೆ. ಗೋಡೆಯಲ್ಲಿ ಫಂಗಸ್ ಕಾಣಿಸಿಕೊಂಡಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಶೀಘ್ರ ದುರಸ್ತಿ ಭರವಸೆ ನೀಡಿದ್ದಾರೆ. ಆಸ್ಪತ್ರೆಯ ಸ್ಥಿತಿಗತಿಯ ಕುರಿತು ಶೀಘ್ರವೇ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವುದಾಗಿ ಹೇಳಿದರು.
ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಮಾತನಾಡಿ, ನ್ಯಾಯಾಧೀಶರು ಆಸ್ಪತ್ರೆ ಎಲ್ಲ ವಿಭಾಗಗಳಿಗೆ ಭೇಟಿನೀಡಿ ಪರಿಶೀಲಿಸಿದ್ದಾರೆ. ಆಸ್ಪತ್ರೆಯ ಸಮಸ್ಯೆಗಳನ್ನು ಗಮನಕ್ಕೆ ತರಲಾಗಿದೆ. ಬಿಆರ್‌ಎಸ್ ಹೆಲ್ತ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಆಸ್ಪತ್ರೆಯನ್ನು ನಿರ್ವಹಣೆಯನ್ನುಮೇ 31, 2022ರಿಂದ ನಿಲ್ಲಿಸಿದ್ದು, ಸರ್ಕಾರವೇ ನಿರ್ವಹಣೆ ಮಾಡುತ್ತಿದೆ. ಆಸ್ಪತ್ರೆಯಲ್ಲಿವೈದ್ಯರ ಕೊರತೆ ಇಲ್ಲ ಆದರೆ, ಸಿಬ್ಬಂದಿ ಕೊರತೆ ಇದೆ. ಸಮಸ್ಯೆ ನಿವಾರಣೆಯಾದರೆ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಸಿಗಲಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಶರ್ಮಿಳಾ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ನಿತ್ಯಾನಂದ ವಳಕಾಡು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.