ADVERTISEMENT

ಉಡುಪಿ | ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 3:55 IST
Last Updated 7 ನವೆಂಬರ್ 2024, 3:55 IST
ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಸ್ವಾಗತ ಕೋರಲಾಯಿತು
ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಸ್ವಾಗತ ಕೋರಲಾಯಿತು   

ಉಡುಪಿ: ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ ‘ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸವನ್ನು ಹೊಂದಿದ ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಸ್ವಾಗತ ಕೋರಿ ಅವರು ಮಾತನಾಡಿದರು.

ಕನ್ನಡ ಪರಂಪರೆ ದೇಶದ ಪ್ರಾಚೀನ ಪರಂಪರೆಯಲ್ಲಿ ಒಂದಾಗಿದ್ದು, ಸುಮಾರು 2000 ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಇತಿಹಾಸವನ್ನು ಹೊಂದಿದೆ. ಕನ್ನಡ ನುಡಿಯನ್ನು ಉಳಿಸಿ ಬೆಳೆಸುವ ಕಾಯಕದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ಡಿಸೆಂಬರ್ 20, 21 ಹಾಗೂ 22 ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ADVERTISEMENT

ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಲಿ ಎಂದು ಹಾರೈಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕನ್ನಡ ಭಾಷೆಯ ಸೊಗಡನ್ನು ಎಲ್ಲೆಡೆ ಪಸರಿಸುವ ಜೊತೆಗೆ, ಮಾತೃ ಭಾಷೆಯ ಕುರಿತು ಭಾಷಾಭಿಮಾನವನ್ನು ಬೆಳಸಿಕೊಂಡು ಕನ್ನಡ ನಾಡು ನುಡಿ ಹಾಗೂ ಸಂಸ್ಕೃತಿಯ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಬದ್ದರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಮೆರವಣಿಗೆಯ ಮೂಲಕ ರಥಯಾತ್ರೆಯನ್ನು ಬೀಳ್ಕೊಡಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಸುಬ್ರಮಣ್ಯ ಶೆಟ್ಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.