ಉಡುಪಿ: ವಿಧಾನಪರಿಷತ್ ಉಪ ಚುನಾವಣೆಗೆ ಇದೇ 21ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ.
ಬಂದೂಕು, ಚೂರಿ, ಲಾಠಿ ಸೇರಿದಂತೆ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವಂತಿಲ್ಲ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ತೆರೆಯಬಾರದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮತದಾನ ದಿನದಂದು ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಮಾಡುವುದು, ಕಲ್ಲು, ಸ್ಫೋಟಕ ವಸ್ತು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದು ಹಾಗೂ ಶೇಖರಿಸುವುದನ್ನು ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಇರುವುದಿಲ್ಲ. ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ನಿಯಮಗಳನ್ನು ಮೀರಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆದೇಶ ಅನ್ವಯಿಸುದಿಲ್ಲ. ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕು ಎಂದೂ ಹೇಳಿದೆ.
ಮತದಾನದ ದಿನದಂದು ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿ. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.