ADVERTISEMENT

ಹುತಾತ್ಮರ ಆದರ್ಶ ಪಾಲಿಸೋಣ: ನ್ಯಾ.ಕಿರಣ್ ಎಸ್. ಗಂಗಣ್ಣನವರ್

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 6:28 IST
Last Updated 22 ಅಕ್ಟೋಬರ್ 2024, 6:28 IST
ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು
ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು   

ಉಡುಪಿ: ‘ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಬಲಿಕೊಟ್ಟ ಹುತಾತ್ಮರ ಬಲಿದಾನವನ್ನು ನಾವು ನೆನೆದುಕೊಂಡು ಅದರ ಮೂಲಕ ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತವರಾಗಬೇಕು’ ಎಂದು ಉಡುಪಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಸಶಸ್ತ್ರ ಘಟಕದ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ಅವರು ಮಾತನಾಡಿದರು.

ಹುತಾತ್ಮರ ತ್ಯಾಗ ಮತ್ತು ಬಲಿದಾನ ದೇಶದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಕಾರಣವಾಗಿದೆ. ಅವರ ಆದರ್ಶಗಳನ್ನು ಪಾಲಿಸಬೇಕು. ದೇಶವೆಂದರೆ ಕೇವಲ ಭೌಗೋಳಿಕ ವಸ್ತುಗಳಿಂದ ಆಗಿರುವಂತದಲ್ಲ. ಬದಲಿಗೆ ಅದು ಎಲ್ಲಾ ರೀತಿಯ ಮಾನವ, ಪ್ರಾಣಿ ಹಾಗೂ ಸಸ್ಯ ಸಂಕುಲಗಳನ್ನು ಒಳಗೊಂಡ ವ್ಯವಸ್ಥೆ. ದೇಶ ಕಟ್ಟುವಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾತನಾಡಿ, ಒಂದು ವರ್ಷದಲ್ಲಿ ದೇಶದಲ್ಲಿ ಒಟ್ಟು 216 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ್ದಾರೆ. ಅವರಲ್ಲಿ ಕರ್ನಾಟಕದ ಐವರು ಇದ್ದಾರೆ ಎಂದರು.

ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ಕರಾವಳಿ ಕಾವಲು ಪೊಲೀಸ್ ಪಡೆಯ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಟಿ ಸಿದ್ದಲಿಂಗಪ್ಪ, ಪಿ. ಎ. ಹೆಗ್ಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.