ADVERTISEMENT

ಮಲ್ಪೆ ಅಭಿವೃದ್ಧಿ ಸಮಿತಿ ಸಭೆ: ಪ್ರವಾಸಿಗರಿಗೆ ಮೂಲ ಸೌಕರ್ಯ ಕಲ್ಪಿಸಿ– ಡಿಸಿ

ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2024, 6:42 IST
Last Updated 10 ನವೆಂಬರ್ 2024, 6:42 IST
ಮಲ್ಪೆ ಅಭಿವೃದ್ಧಿ ಸಮಿತಿ ಸಭೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಜರುಗಿತು
ಮಲ್ಪೆ ಅಭಿವೃದ್ಧಿ ಸಮಿತಿ ಸಭೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಜರುಗಿತು   

ಉಡುಪಿ: ಮಲ್ಪೆ ಕಡಲ ತೀರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲ್ಪೆ, ಪಡುಕೆರೆ ಬೀಚ್ ಪ್ರದೇಶದ ಸ್ವಚ್ಛತಾ ನಿರ್ವಹಣೆ, ಫುಡ್‌ಕೋರ್ಟ್, ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒಳಗೊಂಡಂತೆ ಬೀಚ್ ಪ್ರದೇಶದ ಮಾಸ್ಟರ್ ಪ್ಲಾನ್ ವರದಿಯನ್ನು ಶೀಘ್ರ ತಯಾರಿಸಬೇಕು ಎಂದರು.

ಮಲ್ಪೆ ಕಡಲ ತೀರದಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸುರಕ್ಷತೆಗೆ ಪ್ರಥಮ ಆದ್ಯತೆಯನ್ನು ನೀಡುವುದರೊಂದಿಗೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಬರುವವರಿಗೆ ಸ್ಥಳೀಯ ಕಡಲ ತೀರದ ಮಾಹಿತಿ ಇರುವುದಿಲ್ಲ. ಅವರಿಗೆ ಮಾಹಿತಿ ತಿಳಿಸಲು ಒತ್ತು ನೀಡಬೇಕು. ಇದರಿಂದ ಯಾವುದೇ ಅವಘಡಗಳು ಆಗದಂತೆ ತಪ್ಪಿಸಲು ಸಾಧ್ಯ ಎಂದು ಹೇಳಿದರು.

ಬೀಚ್ ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಜೀವ ರಕ್ಷಕ ಸಿಬ್ಬಂದಿಯನ್ನು ಆಯ್ಕೆ ಮಾಡಿ, ಅವರಿಗೆ ಅಗತ್ಯ ತರಬೇತಿ ನೀಡಿ ಅವರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಬೇಕು ಎಂದ ಅವರು, ಸೇಂಟ್ ಮೇರೀಸ್ ದ್ವೀಪಕ್ಕೆ ಅಗತ್ಯವಿರುವ ಜೀವ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ADVERTISEMENT

ಬೀಚ್ ಪ್ರದೇಶದಲ್ಲಿ ಜಲ ಸಾಹಸ ಚಟುವಟಿಕೆಗಳು ನಡೆಸುವಾಗ ಗುತ್ತಿಗೆದಾರರು ಬೋಟ್‌ನ ಸಾಮರ್ಥ್ಯ ಮೀರಿ ಹೆಚ್ಚಿನ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ ಗುತ್ತಿಗೆದಾರರು ನಿಯಮ ಮೀರಿ ಹಾಗೂ ಸಾಮರ್ಥ್ಯ ಮೀರಿ ಪ್ರವಾಸಿಗರನ್ನು ಬೋಟ್‌ನಲ್ಲಿ ಕರೆದುಕೊಂಡು ಬಂದಲ್ಲಿ ದಂಡ ವಿಧಿಸುವುದರ ಜೊತೆಗೆ ನೋಟಿಸ್ ನೀಡಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭೆಯ ಸದಸ್ಯರಾದ ಯೋಗೀಶ್ ಸಾಲಿಯಾನ್, ಲಕ್ಷ್ಮಿ ಮಂಜುನಾಥ್ ಹಾಗೂ ವಿಜಯ ಕೊಡವೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.