ADVERTISEMENT

‌‘ನಿಯಮ ಉಲ್ಲಂಘಿಸಿದರೆ ದೂರು ದಾಖಲಿಸಿ’

ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 5:48 IST
Last Updated 26 ಜೂನ್ 2024, 5:48 IST
ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆ ನಡೆಯಿತು
ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆ ನಡೆಯಿತು   

ಉಡುಪಿ: ಆಳುಗುಂಡಿಯೊಳಗೆ (ಮ್ಯಾನ್‌ಹೋಲ್‌) ಇಳಿದು ಸ್ವಚ್ಛಗೊಳಿಸುವ (ಮ್ಯಾನುವಲ್‌ ಸ್ಕ್ಯಾವೆಂಜರ್‌) ಪದ್ಧತಿಯನ್ನು ನಿರ್ಬಂಧಿಸಿದ್ದು, ಇಂತಹ ಪ್ರಕರಣ ಕಂಡು ಬಂದರೆ ದೂರು ದಾಖಲಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮ್ಯಾನುವಲ್‌ ಸ್ಕ್ಯಾವೆಂಜರ್‌ ಕುರಿತು ದೂರು ಬಂದರೆ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶೀಲನಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ADVERTISEMENT

ಮನೆ, ಕಂಪನಿಗಳು, ಆಸ್ಪತ್ರೆ, ಅಪಾರ್ಟ್‌ಮೆಂಟ್ ಸೇರಿದಂತೆ ಯಾವುದೇ ಕಟ್ಟಡಗಳಲ್ಲಿ ಮ್ಯಾನ್ ಹೋಲ್, ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಪಿಟ್ ಗುಂಡಿಗಳು ಕಟ್ಟಿಕೊಂಡಲ್ಲಿ ಸ್ವಚ್ಛಗೊಳಿಸಲು ಅನುಕೂಲವಾಗುವಂತೆ ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಹಾಯವಾಣಿ ಸಂಖ್ಯೆ 14420ಕ್ಕೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ 94809 85555ಕ್ಕೆ ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಸಂಖ್ಯೆ ಪ್ರದರ್ಶಿಸಬೇಕು. ಜಿಲ್ಲೆಯ ಮ್ಯಾನುವಲ್‌ ಸ್ಕ್ಯಾವೆಂಜರ್‌ಗಳು ಮತ್ತು ಅವರ ಕುಟುಂಬದವರಿಗೆ ಗುರುತಿನ ಚೀಟಿ ನೀಡಬೇಕು ಎಂದು ಹೇಳಿದರು.

ಒಂದು ಬಾರಿ ಆರ್ಥಿಕ ಸಹಾಯ, ಮನೆ, ನಿವೇಶನ, ಶಿಕ್ಷಣ, ವಿದ್ಯಾರ್ಥಿವೇತನ, ಉದ್ಯೋಗ, ಸಾಲಸೌಲಭ್ಯ ಇತ್ಯಾದಿ  ಸೌಲಭ್ಯಗಳನ್ನು ಕಲ್ಪಿಸಬೇಕು. ವಸತಿ ಶಾಲೆಗಳಲ್ಲಿ ಮ್ಯಾನುವಲ್‌ ಸ್ಕ್ಯಾವೆಂಜರ್‌ ಹಾಗೂ ಪೌರ ಕಾರ್ಮಿಕರ ಮಕ್ಕಳಿಗೆ ಶೇ 5ರಷ್ಟು ನೇರ ಪ್ರವೇಶ ಕಲ್ಪಿಸಲಾಗುವುದು. ಈ ಕುರಿತು ಅವರಿಗೆ ಮಾಹಿತಿ ನೀಡಬೇಕು ಎಂದರು.

ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪ್ರತೀ ತಿಂಗಳು ಸರಿಯಾದ ಸಮಯಕ್ಕೆ ವೇತನ ಪಾವತಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ 155 ಪೌರ ಕಾರ್ಮಿಕರನ್ನು ನೇಮಕಾತಿ ಮಾಡಲಾಗಿದೆ. ಅವರಲ್ಲಿ 3 ಜನ ಪೌರ ಕಾರ್ಮಿಕರ ನೇಮಕಾತಿ ಆಗಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಪೌರ ಕಾರ್ಮಿಕರು ಸುರಕ್ಷತಾ ಪರಿಕರ ಬಳಕೆ ಮಾಡದಿರುವುದು ಕಂಡುಬರುತ್ತಿದೆ. ಕಡ್ಡಾಯವಾಗಿ ಬಳಕೆ ಮಾಡುವಂತೆ ಸೂಚಿಸಬೇಕು. ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು. ಮ್ಯಾನುವಲ್‌ ಸ್ಕ್ಯಾವೆಂಜರ್‌ ಹಾಗೂ ಪೌರ ಕಾರ್ಮಿಕರಿಗೆ ಆದ್ಯತೆಯ ಮೇಲೆ ಒಂದು ತಿಂಗಳ ಒಳಗಾಗಿ ನಿವೇಶನ, ನಿವೇಶನ ಹೊಂದಿದವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತ ಮಡ್ಲೂರು, ಪೌರಾಯುಕ್ತ ರಾಯಪ್ಪ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.