ADVERTISEMENT

ಮಳೆ ಹಾನಿ: ಕಾಮಗಾರಿ ಪೂರ್ಣಗೊಳಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಸೂಚನೆ

ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2024, 3:55 IST
Last Updated 24 ನವೆಂಬರ್ 2024, 3:55 IST
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಜರುಗಿತು
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಜರುಗಿತು   

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಯಾವುದೇ ಇಲಾಖೆ ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರುಗಳ ಜೀವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆಗಳ ತುರ್ತು ದುರಸ್ತಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನ ಸಮರ್ಪಕವಾಗಿ ಬಳಸಿಕೊಂಡು ತ್ವರಿತಗತಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿಸಬೇಕು. ತಹಶೀಲ್ದಾರರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಭೂ ಕುಸಿತದಿಂದ ಜನ, ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವ ಉದ್ದೇಶದಿಂದ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇವುಗಳ ಗುಣಮಟ್ಟವನ್ನು ತಹಶೀಲ್ದಾರರು ಪರಿಶೀಲಿಸಬೇಕು ಎಂದರು.

ಈಗಾಗಲೇ ಪಿ.ಡಿ. ಖಾತೆಯಲ್ಲಿ ₹10.39 ಕೋಟಿ ಅನುದಾನ ಲಭ್ಯವಿದೆ. ಬರ ನಿರ್ವಹಣೆಗೆ ಸಂಬಂಧಪಟ್ಟಂತೆಯೂ ಅನುದಾನದಲ್ಲಿ ಯಾವುದೇ ಕೊರತೆ ಇಲ್ಲ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ರವೀಂದ್ರ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT