ADVERTISEMENT

ತೂಗು ಸೇತುವೆಯ ಹರಿಕಾರ ಗಿರೀಶ್ ಭಾರಧ್ವಾಜ್‌ಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 11:14 IST
Last Updated 23 ಸೆಪ್ಟೆಂಬರ್ 2021, 11:14 IST
ಗಿರೀಶ್ ಭಾರದ್ವಾಜ್
ಗಿರೀಶ್ ಭಾರದ್ವಾಜ್    

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದಿಂದ ಕೊಡಮಾಡುವ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಿರೀಶ್ ಭಾರದ್ವಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು.ಎಸ್‌.ಶೆಣೈ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವರಾಮ ಕಾರಂತರ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕಳೆದ 16 ವರ್ಷಗಳಿಂದ ಪ್ರತಿಷ್ಠಾನದಿಂದ ಪ್ರಶಸ್ತಿ ನೀಡಲಾಗುತ್ತಿದೆ.

ಸಾಧಕರಾದ ವೀರಪ್ಪ ಮೊಯ್ಲಿ, ಎಂ.ಎನ್.ವೆಂಕಟಾಚಲಯ್ಯ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಬಿ. ಜಯಶ್ರೀ, ಮೋಹನ ಆಳ್ವ, ಸಾಲುಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರಾ, ಡಾ.ಎಸ್.ಎಲ್.ಭೈರಪ್ಪ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ‌.

2021ನೇ ಸಾಲಿನ ಪ್ರಶಸ್ತಿಯನ್ನು ಗಿರೀಶ್ ಭಾರದ್ವಾಜ್ ಅವರಿಗೆ ನೀಡಲಾಗುತ್ತಿದೆ ಎಂದರು.

ಶಿವರಾಮ ಕಾರಂತರ ಜನ್ಮದಿನವಾದ ಅ.10 ರಂದು ಮಧ್ಯಾಹ್ನ 3 ಗಂಟೆಗೆ ಕೋಟದ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರಂತರ ಜನ್ಮ ದಿನದ ಅಂಗವಾಗಿ ಅ.1ರಿಂದ 10ರವರೆಗೆ ಸಾಂಸ್ಕೃತಿಕ- ಸಾಹಿತ್ಯಿಕ ಕಾರ್ಯಕ್ರಮಗಳು ಆನ್‌ಲೈನ್‌ನಲ್ಲಿ ನಡೆಯಲಿವೆ. ಆಸಕ್ತರು ಕಾರಂತ ಥೀಂ ಪಾರ್ಕ್‌ನ ಫೇಸ್‌ಬುಕ್ ಹಾಗೂ ಯೂಟ್ಯೂಬ್‌ ಪುಟಗಳಲ್ಲಿ ವೀಕ್ಷಿಸಬಹುದು ಎಂದರು.

ಸೇತುಬಂಧು ಗಿರೀಶ್ ಭಾರದ್ವಾಜ್ ಗ್ರಾಮೀಣ ಪ್ರದೇಶಗಳಲ್ಲಿ 130 ತೂಗು ಸೇತುವೆಗಳನ್ನು ನಿರ್ಮಾಣ ಮಾಡಿದ್ದಾರೆ. ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಇವರ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.