ADVERTISEMENT

ಉಡುಪಿ | ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2024, 5:26 IST
Last Updated 10 ಅಕ್ಟೋಬರ್ 2024, 5:26 IST
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ಜರುಗಿತು
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ಜರುಗಿತು   

ಉಡುಪಿ: ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ ಮಕ್ಕಳು ಮೀನು ಹೆಕ್ಕುವ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಈ ಹಿಂದೆ ದಾಳಿ ನಡೆಸಿದರೂ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಕಾರ್ಯಪಡೆಯ ಸದಸ್ಯರು ಅನಿರೀಕ್ಷಿತವಾಗಿ ಪರಿಶೀಲನೆ ನಡೆಸುವುದರೊಂದಿಗೆ ಇದಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು ಎಂದು ಸೂಚನೆ ನೀಡಿದರು.

ಸಮಾಜದಲ್ಲಿ ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಪೋಷಕರಿಗೆ ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುವುದರ ಜೊತೆಗೆ 14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ವ್ಯಾಪಾರಿಗಳು ಅಥವಾ ಉದ್ಯಮಿಗಳ ವಿರುದ್ಧ ಕಾನೂನಿನ ಅನ್ವಯ ತಪ್ಪದೇ ಪ್ರಕರಣ ದಾಖಲಿಸಿ, ಅವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದೂ ಹೇಳಿದರು.

ADVERTISEMENT

ಒಂದು ವರ್ಷದಲ್ಲಿ 111 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಅವರಲ್ಲಿ ಕೆಲವರು ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬಂದವರಾಗಿದ್ದು, ಅವರು ಶಾಲೆಗೆ ಹೋಗುವಂತೆ ನಿಗಾ ವಹಿಸಬೇಕು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್, ಪೌರಾಯುಕ್ತ ರಾಯಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಬಾಲಕಾರ್ಮಿಕ ಯೋಜನ ಸಂಘದ ನಿರ್ದೇಶಕಿ ಅಮೃತ, ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಇದ್ದರು.

ಬಾಲ ಕಾರ್ಮಿಕತೆಯು ಮಕ್ಕಳ ಬಾಲ್ಯ ಅವರ ಸಾಮರ್ಥ್ಯ ಘನತೆ ಕಸಿದುಕೊಳ್ಳುತ್ತದೆ. ಮಕ್ಕಳು ಅವರು ಶಿಕ್ಷಣವಂತರಾಗಬೇಕು. ಉತ್ತಮ ವಿದ್ಯಾವಂತರಾಗಿ ಭವಿಷ್ಯ ರೂಪಿಸಿಕೊಳ್ಳಬೇಕು
ಕೆ. ವಿದ್ಯಾಕುಮಾರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.