ಉಡುಪಿ: ಮತಾಂಧ ಟಿಪ್ಪು ಸುಲ್ತಾನ್ ಜಯಂತಿಯನ್ನು ಬಹಿರಂಗವಾಗಿ ಆಚರಿಸಲು ಶಕ್ತಿ ಇಲ್ಲದ ರಾಜ್ಯ ಸರ್ಕಾರ ನಾಲ್ಕು ಗೋಡೆಗಳ ಮಧ್ಯೆ ಆಚರಿಸಲು ನಿರ್ಧರಿಸಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ ಕುಟುಕಿದರು.
ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ‘ಆಚರಣೆಯಲ್ಲಿ ಇಲ್ಲದ ಟಿಪ್ಪು ಜಯಂತಿಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಚರಿಸಲು ಮುಂದಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಅದೇ ಹಾದಿಯಲ್ಲಿ ಸಾಗಿರುವುದು ದುರಂತ’ ಎಂದು ಟೀಕಿಸಿದರು.
ಟಿಪ್ಪು ಸಾಮ್ರಾಜ್ಯ ವಿಸ್ತರಣೆಗೆ ಯತ್ನಿಸಿದನೇ ಹೊರತು, ರಾಜ್ಯಕ್ಕಾಗಲಿ, ದೇಶಕ್ಕಾಗಲಿ ಕೊಡುಗೆ ಕೊಟ್ಟಿಲ್ಲ. ಸಂಪತ್ತನ್ನು ಲೂಟಿ ಹೊಡೆಯಲು 8 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳ ಮೇಲೆ ಹಾಗೂ 1000ಕ್ಕೂ ಹೆಚ್ಚು ಚರ್ಚ್‌ಗಳ ಮೇಲೆ ದಾಳಿ ನಡೆಸಿದ್ದಾನೆ ಎಂದು ವಾಗ್ದಾಳಿ ನಡೆಸಿದರು.
ಟಿಪ್ಪು ಜಯಂತಿ ಆಚರಣೆ ವಿರುದ್ಧ ರಾಜ್ಯದಾದ್ಯಂತ ನ.9ರಂದು ಪ್ರತಿಭಟನೆ ನಡೆಸಲಾಗುವುದು. ಅಂದು ಸಂಜೆ 4ಕ್ಕೆ ಪಕ್ಷದ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಕೂಡಲೇ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಮಟ್ಟಾರು ಒತ್ತಾಯಿಸಿದರು.
ಮೀಸಲಾತಿ ಷಡ್ಯಂತ್ರ:ಸ್ಥಳೀಯ ಸಂಸ್ಥೆ ಚುನಾವಣೆ ಸಂದರ್ಭ ರಾಜ್ಯ ಸರ್ಕಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗಧಿಗೊಳಿಸಿ ಪಟ್ಟಿ ಬಿಡುಗಡೆ ಮಾಡಿತ್ತು. ಫಲಿತಾಂಶ ಪ್ರಕಟಗೊಂಡ ಬಳಿಕ 40 ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಬೇಕು ಎಂಬ ಷಡ್ಯಂತ್ರದಿಂದ ಹೊಸ ಮೀಸಲಾತಿ ಪಟ್ಟಿ ಹೊರಡಿಸಿತು.
ಸರ್ಕಾರದ ನಿರ್ಧಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಹಳೆಯ ಮೀಸಲಾತಿ ಪಟ್ಟಿಯಂತೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದೆ. ಆದರೆ, ಜಿಲ್ಲಾಡಳಿತ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಪರಿಣಾಮ ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ ಹೊರಗಿಡುವ ಕ್ರಮ ಇದಾಗಿದ್ದು, ಜಿಲ್ಲಾಡಳಿತ ಸಬೂಬು ಹೇಳದೆ ತಕ್ಷಣ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಿಸಬೇಕು ಎಂದು ಮಟ್ಟಾರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಯಶಪಾಲ್ ಸುವರ್ಣ, ಪ್ರಭಾಕರ್ ಪೂಜಾರಿ, ಶಿವಕುಮಾರ್ ಅಂಬಲಪಾಡಿ ಅವರೂ ಇದ್ದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದು, ಬೈಂದೂರಿನಲ್ಲಿ ಮತ್ತೊಮ್ಮೆ ಬಿಜೆಪಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಬಿಜೆಪಿಗೆ ನಿರೀಕ್ಷೆಯಷ್ಟು ಮತಗಳು ಬಿದ್ದಿಲ್ಲ. ಮತದಾನ ಪ್ರಮಾಣ ಕಡಿಮೆಯಾಗಿದ್ದು ಇದಕ್ಕೆ ಕಾರಣ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20ರಿಂದ25 ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳ ತೆರವುಗೊಳಿಸಲು ಜಿಲ್ಲಾಡಳಿತವೇ ನಿರ್ಧಾರ ತೆಗೆದುಕೊಳ್ಳಬಹುದಿತ್ತು. ಆದರೆ, ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಮಸ್ಯೆಯನ್ನು ಜಟಿಲಗೊಳಿಸಲಾಗಿದೆ. ಶಾಸಕ ರಘುಪತಿ ಭಟ್ ಅವರು ಕೇಂದ್ರ ಸರ್ಕಾರದ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. 2011ರ ನಂತರ ಜಿಲ್ಲೆಯಲ್ಲಿ ಮರಳು ತೆಗೆಯುತ್ತಿರುವ 172 ಗುತ್ತಿಗೆದಾರರಿಗೂ ಅನುಮತಿ ಸಿಗುವ ವಿಶ್ವಾಸವಿದೆ ಎಂದು ಮಟ್ಟಾರು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಅನುಮತಿ ಸಿಗದಿದ್ದರೆ ಮತ್ತೆ ಧರಣಿ ನಡೆಸಲಾಗುವುದು. ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭವಾಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.