ಉಡುಪಿ: ಜಿಲ್ಲೆಯಲ್ಲಿನ ಭೂಕುಸಿತ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸಿ, ಭೂಕುಸಿತ ತಡೆಗಟ್ಟುವ ಬಗ್ಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಈಗಾಗಲೇ ಬೆಂಗಳೂರಿನ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಕಚೇರಿಯ ತಾಂತ್ರಿಕ ಸಿಬ್ಬಂದಿ ಸಮೀಕ್ಷೆ ಮಾಡಿ, ವರದಿಯೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ನಗರದ ಅಜ್ಜರಕಾಡು ಗಾಂಧಿ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭೂಕುಸಿತ ತಡೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದೂ ಭರವಸೆ ನೀಡಿದರು.
ರಾಜ್ಯದ ಸರ್ಕಾರಿ ಶಾಲೆಗಳ 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಕಲಿಕಾ ಸಾಮಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಹಾಗೂ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲು ₹14.2 ಕೋಟಿ ವೆಚ್ಚದ 'ಓದು ಕರ್ನಾಟಕ' ಚಟುವಟಿಕೆಗೆ ಅನುಮೋದನೆ ನೀಡಲಾಗಿದೆ ಎಂದೂ ಹೇಳಿದರು.
ಶಾಸಕರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ನಗರದಲ್ಲಿ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.