ಉಡುಪಿ: ಪ್ರಧಾನಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆತಿಥ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ. ಉದಯ್ ಎಂಬುವವರು ಬುಧವಾರ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್ ಆಚಾರ್ಯ ಅವರಿಗೆ ಕರೆ ಮಾಡಿ ತಾನು ಪ್ರಧಾನಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದು, ಕುಟುಂಬ ಸಮೇತರಾಗಿ ಮಠಕ್ಕೆ ಬರುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕೋರಿದ್ದಾರೆ.
ಭಾರತ ಸರ್ಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಮಠಕ್ಕೆ ಬಂದ ಉದಯ್ ಹಾಗೂ ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಗುರುವಾರ ಬೆಳಿಗ್ಗೆ ವಿಶೇಷ ದರ್ಶನ ಮಾಡಿಸಿದ್ದೇವೆ. ಅವರ ಚಲನವಲನದಿಂದ ಅನುಮಾನಗೊಂಡು ವಿಚಾರಿಸಿದಾಗ ಸೂಕ್ತ ಉತ್ತರ ನೀಡಿಲ್ಲ. ಪ್ರಧಾನಿ ಕಾರ್ಯಾಲಯದ ವೆಬ್‌ಸೈಟ್ ಅನ್ನು ಪರಿಶೀಲಿಸಿದಾಗ ಅವರ ಬಗ್ಗೆ ಸಮರ್ಪಕವಾದ ಮಾಹಿತಿ ದೊರೆತಿಲ್ಲ. ಕೇಂದ್ರ ಸರ್ಕಾರದ ಅಧಿಕಾರಿ ಎಂದು ಹೇಳಿಕೊಂಡು, ಮಠಕ್ಕೆ ಬಂದು, ಮೋಸ ಮಾಡಿದ್ದಾರೆ ಎಂದು ಮಠದ ವ್ಯವಸ್ಥಾಪಕ ನಂದನ್ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಉದಯ್ ಎಲ್‌ಐಸಿ ಏಜೆಂಟ್ ಎಂದು ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.