ಉಡುಪಿ: ಹೆಬ್ರಿ ತಾಲ್ಲೂಕಿನ ಪೀತುಬೈಲಿನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡನ ಎನ್‌ಕೌಂಟರ್ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ, ಸತ್ಯಾಸತ್ಯತೆ ತೆರೆದಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ವಿಕ್ರಂ ಗೌಡ ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಅತ್ಯಂತ ಬಡತನದ ಹಿನ್ನೆಲೆಯಲ್ಲಿ ಬಂದಿದ್ದಾನೆ. ಆತನ ಕುಟುಂಬಕ್ಕೆ ಸೂಕ್ತ ಪರಿಹಾರ, ನ್ಯಾಯ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪೊಲೀಸರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದಾಗ ಆತ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಆದರೆ ಹಲವರು ಈ ಕಾರ್ಯಾಚರಣೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದರಿಂದ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಲಾಗಿದೆ.
ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ ಬಿರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.