ಅಂಕೋಲಾ: ತಾಲ್ಲೂಕಿನ ಅಗಸೂರಿನಲ್ಲಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭವಾಗಿದೆ. ಇಂಗ್ಲಿಷ್ ಮಾಧ್ಯಮ ತರಗತಿಗಳಿಗೆ ಭಾರಿ ಬೇಡಿಕೆ ಬಂದಿದ್ದು, ಈಗಾಗಲೇ 30 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಇನ್ನೂ ಅರ್ಜಿಗಳು ಸಲ್ಲಿಕೆಯಾಗುತ್ತಿವೆ.
ಈಗಾಗಲೇ ಶಿಕ್ಷಕರು ಸುತ್ತಮುತ್ತ ಹಳ್ಳಿಗಳಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಶಿರಗುಂಜಿ, ವಾಸರಕುದ್ರಿಗೆ, ಹೊನ್ನಳ್ಳಿ, ಮಾಸ್ತಿಕಟ್ಟೆ, ಬಾಳೇಗುಳಿ ಸೇರಿದಂತೆ ಅನೇಕ ಹಳ್ಳಿಗಳಿಂದವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಗ್ರಾಮೀಣ ಭಾಗಗಳಲ್ಲಿ ಒಂದನೇ ತರಗತಿಯಿಂದದ್ವಿತೀಯ ಪಿಯುವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರೆಯುಂತಾಗಬೇಕು. ಇದರಿಂದ ಶಾಲೆಯ ಮೂಲಸೌಕರ್ಯಗಳ ಅಭಿವೃದ್ಧಿ, ಶಿಕ್ಷಕರ ಬೋಧನಾ ಸಾಮರ್ಥ್ಯ ವೃದ್ಧಿ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೂಡ ದೊರೆಯುತ್ತದೆ ಎಂಬುದು ಯೋಜನೆಯ ಉದ್ದೇಶವಾಗಿದೆ.
ಶಾಲೆಯ ವಿಶೇಷತೆಗಳು:ಈ ಶಾಲೆಯಲ್ಲಿ ಈಗಾಗಲೇ ಒಂದನೇ ತರಗತಿಯಿಂದ ದ್ವಿತೀಯ ಪಿಯುವರೆಗೆ 500 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಮಕ್ಕಳಿಗೆ ಉತ್ತಮ ಕೊಠಡಿ, ಸುಸಜ್ಜಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇದೆ.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಾಲಾ ಹಂತದಲ್ಲೇ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ವೃತ್ತಿ ಶಿಕ್ಷಣ, ಕಲೆ, ಸಂಗೀತ ಇತ್ಯಾದಿ ಸಹ ಪಠ್ಯ ಚಟುವಟಿಕೆಗಳ ಕಲಿಕೆಗೂ ಅವಕಾಶವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.