ಮುರುಡೇಶ್ವರ (ಉತ್ತರ ಕನ್ನಡ ಜಿಲ್ಲೆ): ‘ಮೀನುಗಾರಿಕೆ ವೇಳೆ ಮೃತಪಡುವ ಮೀನುಗಾರರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗುವುದು. ರಾಜ್ಯದ ಮೀನುಗಾರರಿಗೆ ಹತ್ತು ಸಾವಿರ ಮನೆಗಳನ್ನು ಮಂಜೂರು ಮಾಡಲು ನಿರ್ಧರಿಸಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ವಿಶ್ವ ಮೀನುಗಾರಿಕೆ ದಿನಾಚರಣೆ ಪ್ರಯುಕ್ತ ಮೀನುಗಾರಿಕೆ ಇಲಾಖೆಯು ಗುರುವಾರ ಇಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮತ್ಸ್ಯಮೇಳವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ‘ಮೃತ ಮೀನುಗಾರರ ಕುಟುಂಬಕ್ಕೆ ಸಂಕಷ್ಟ ಪರಿಹಾರ ನಿಧಿಯಡಿ ₹5 ಲಕ್ಷ ನೀಡಲಾಗುತಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅದನ್ನು ₹8 ಲಕ್ಷಕ್ಕೆ ಏರಿಸಿತು. ಆರ್ಥಿಕ ಸ್ಥಿತಿವಂತರಲ್ಲದ ಮೀನುಗಾರರಿಗೆ ನೆರವಾಗಲು ಇನ್ನೂ ₹2 ಲಕ್ಷ ಏರಿಕೆ ಮಾಡಲಾಗುವುದು’ ಎಂದರು.
‘ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಸಿದ್ಧಪಡಿಸಲು ಜಿಲ್ಲಾಧಿಕಾರಿಗಳಿಂದ ಸಲಹೆ ಪಡೆಯಲಾಗಿದೆ. ಇದು ಉದ್ಯೋಗ ಸೃಷ್ಟಿಗೆ ಪೂರಕವಾಗಲಿದೆ’ ಎಂದರು.
ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಮಾತನಾಡಿ,‘ರಾಜ್ಯದಲ್ಲಿ ಮೊದಲ ಬಾರಿಗೆ ಸಮುದ್ರ ಆಂಬುಲೆನ್ಸ್ ಸೇವೆ ಆರಂಭಿಸಲು ಟೆಂಡರ್ ಕರೆಯಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು’ ಎಂದರು.
‘ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಕೂಡ ಕಾಂಗ್ರೆಸ್‌ನವರೇ' ಎಂದು ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ವೇದಿಕೆ ಹಂಚಿಕೊಂಡ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಉದ್ದೇಶಿಸಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.