ಸಿದ್ದಾಪುರ: ‘ಬಡವರ ಬದುಕಿಗೆ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಜಾರಿಗೆ ತಂದ ‘ಗ್ಯಾರಂಟಿ‘ ಯೋಜನೆಯನ್ನು ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ‘ ಎಂದು ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಿದ್ದಾಪುರ ತಾಲ್ಲೂಕು ಸಮಿತಿ ಕಾರ್ಯಾಲಯಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದ ಅವರು, ’ ಈ ಯೋಜನೆಯ ಬಗ್ಗೆ ಕೆಲವರು ಟೀಕಿಸುತ್ತಿರುವುದು ಬಡವರ ಬಗ್ಗೆ ಅವರಿಗಿರುವ ಕಾಳಜಿ ತೋರಿಸುತ್ತದೆ‘ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷ ಕೆ.ಜಿ.ನಾಗರಾಜ ಮಾತನಾಡಿದರು.
ಇದೇ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಿಗೆ ಶಾಸಕ ಭೀಮಣ್ಣ ನಾಯ್ಕ ಗುರುತಿನ ಚೀಟಿ ವಿತರಿಸಿದರು.
ತಾಲ್ಲೂಕು ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯ್ತಿ ಇಒ ದೇವರಾಜ ಹಿತ್ತಲಕೊಪ್ಪ ಉಪಸ್ಥಿತರಿದ್ದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಸಿದ್ದಾಪುರ ಪಟ್ಟಣ ಪರಿಮಿತಿ ವ್ಯಾಪ್ತಿಯ ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯ ರಸ್ತೆ ಸುಧಾರಣೆ ಕಾಮಗಾರಿಗೆ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬುಧವಾರ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ₹1.50 ಕೋಟಿ ಅನುದಾನದಲ್ಲಿ ಪಟ್ಟಣದ ಮುಖ್ಯ ರಸ್ತೆಯ ಚಂದ್ರಗುತ್ತಿ ಸರ್ಕಲ್, ಭಗತ್ ಸಿಂಗ್ ವೃತ್ತ ಹಾಗೂ ಸಾಗರ ಸರ್ಕಲ್ ವಿಸ್ತರಣೆ ಹಾಗೂ ಫೇವರ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿದ್ದು, ಗುತ್ತಿಗೆದಾರರು ತಕ್ಷಣ ಕೆಲಸ ಪ್ರಾರಂಭಿಸಿ ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸುವಂತೆ ಭೀಮಣ್ಣ ನಾಯ್ಕ ಸೂಚಿಸಿದರು.
ಸಿದ್ದಾಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಸದಸ್ಯರಾದ ಸುಧೀರ ನಾಯ್ಕ, ರವಿಕುಮಾರ ನಾಯ್ಕ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಶಿಕಾಂತ ಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.