ADVERTISEMENT

Muda scam: ಸಿಎಂ ವಿರುದ್ಧ ತನಿಖೆಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 7:32 IST
Last Updated 19 ಆಗಸ್ಟ್ 2024, 7:32 IST
   

ಕಾರವಾರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು‌.

ಇಲ್ಲಿನ ಮಿತ್ರ ಸಮಾಜ ಮೈದಾನದಲ್ಲಿ ಸೇರಿದ ಮುಖಂಡರು, ಕಾರ್ಯಕರ್ತರು ರಾಜ್ಯಪಾಲರ ನಡೆಯನ್ನು ಖಂಡಿಸಿದರು.

ನಗರದ ಮುಖ್ಯ ರಸ್ತೆಗಳ ಮೂಲಕ ಮೆರವಣಿಗೆ ನಡೆಸಿ, ರಾಜ್ಯಪಾಲರ ವಜಾಗೊಳಿಸಲು ಆಗ್ರಹಿಸಿದರು. ಭ್ರಷ್ಟಾಚಾರ ಆರೋಪವಿರುವ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ತನಿಖೆಗೆ ಅನುಮತಿಸದಿರುವುದೇಕೆ? ಎಂದು ಪ್ರಶ್ನಿಸುವ ಭಿತ್ತಿಫಲಕ ಪ್ರದರ್ಶಿಸಿದರು.

ADVERTISEMENT

'ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಏಜೆಂಟರಾಗಿದ್ದಾರೆ', 'ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ' ಎಂಬ ಬರಹಗಳಿದ್ದ ಭಿತ್ತಿಫಲಕಗಳು, ಪ್ರಧಾನಿ ನರೇಂದ್ರ ಮೋದಿಯೊಂದಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಇರುವ ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, 'ಗ್ಯಾರಂಟಿ ಯೋಜನೆ ಜಾರಿಗೆ ತಂದು ಬಡವರ ಏಳ್ಗೆಗೆ ಶ್ರಮಿಸಿದ ಸರ್ಕಾರ ಹಣಿಯಲು ಬಿಜೆಪಿ, ಜೆಡಿಎಸ್ ಒಟ್ಟಾಗಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಜನಪ್ರೀಯತೆ ಕುಗ್ಗಿಸಲು ವಾಮಮಾರ್ಗದ ಮೂಲಕ ಯತ್ನಿಸಿದ್ದಾರೆ. ಇದಕ್ಕಾಗಿ ರಾಜಭವನ ದುರ್ಬಳಕೆ ಮಾಡಿಕೊಳ್ಳಲಾಗಿದೆ' ಎಂದು ಆರೋಪಿಸಿದರು.

'ವಿರೋಧಿಗಳು ಎಷ್ಟೇ ಪ್ರಯತ್ನಿಸಿದರೂ ರಾಜ್ಯ ಸರ್ಕಾರ ಅಲುಗಾಡಿಸಲು ಸಾಧ್ಯವಾಗದು' ಎಂದರು.

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, 'ಸಾರ್ವಜನಿಕ ಜೀವನದಲ್ಲಿ ಕಪ್ಪುಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ಧ ಯಾರದೋ ದೂರಿಗೆ ಸಂಬಂಧಿಸಿ ವಿಚಾರಣೆ ನಡೆಸಲು ಅನುಮತಿಸುವ ಮೂಲಕ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಗೆ ಕುಂದು ತಂದಿದ್ದಾರೆ' ಎಂದರು.

ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಪೊಲೀಸರು ಕಾರ್ಯಕರ್ತರನ್ನು ತಡೆಯಲು ಯತ್ನಿಸಿದರು. ಸಚಿವರು, ಶಾಸಕರಿಂದಿಗೆ ಕಾರ್ತಕರ್ತರು ಕಚೇರಿ ಅವಾರಣದೊಳಗೆ ನುಗ್ಗಿದರು. ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಲಾಯಿತು. ರಾಜ್ಯಪಾಲರನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಷ್ಟ್ರಪತಿಗೆ ಬರೆದ ಪತ್ರವನ್ನು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.

ಶಾಸಕರಾದ ಭೀಮಣ್ಣ ನಾಯ್ಕ, ಸತೀಶ ಸೈಲ್, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ್, ಪ್ರಮುಖರಾದ ವಿ.ಎಸ್.ಪಾಟೀಲ, ರವೀಂದ್ರ ನಾಯ್ಕ,  ನಿವೇದಿತ್ ಆಳ್ವಾ, ಸುಜಾತಾ ಗಾಂವಕರ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.