ಮುರ್ಡೇಶ್ವರ: ‘ಪ್ರತಿ ವರ್ಷವೂ ಮುರ್ಡೇಶ್ವರದಲ್ಲಿ ಅಹೋರಾತ್ರಿ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಯೋಜಿಸಲಾಗುವುದು. ಅಗತ್ಯ ಸಹಕಾರ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಇಲ್ಲಿ ಶುಕ್ರವಾರ ರಾತ್ರಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಮಹಾಶಿವರಾತ್ರಿ ಜಾಗರಣೆ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರತಿಯೊಬ್ಬರೂ ದೇವರನ್ನು ನಂಬಿ ಕೆಲಸ ಮಾಡಬೇಕು, ದೇವರಲ್ಲಿ ವಿಶ್ವಾಸ ಇಡಬೇಕು. ಪ್ರತಿ ವರ್ಷ ವಿಜೃಂಭಣೆಯಿಂದ ಈ ಕಾರ್ಯಕ್ರಮ ನಡೆಸಲು ಪ್ರಯತ್ನಿಸಲಾಗುವುದು. ಮುರ್ಡೇಶ್ವರದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಲಾಗುವುದು’ ಎಂದರು.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ‘ಮುರ್ಡೇಶ್ವರದಲ್ಲಿ ಹೆಚ್ಚಿನ ಪ್ರವಾಸೋದ್ಯಮ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಇನ್ನು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಪ್ರಯತ್ನಿಸಲಾಗುವುದು’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಹೊನ್ನಾವರ ಡಿಸಿಎಫ್ ಯೋಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಾಜಪೂತ್, ಭಟ್ಕಳ ಉಪವಿಭಾಗಾಧಿಕಾರಿ ಡಾ.ನಯನಾ, ಭಟ್ಕಳ ತಹಶೀಲ್ದಾರ್ ತಿಪ್ಪೇಸ್ವಾಮಿ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಎಚ್.ವಿ.ಜಯಂತ್, ಮಾವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಪಡಿಯಾರ, ಮುರ್ಡೇಶ್ವರ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಸ್.ಎಸ್.ಕಾಮತ್, ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಅಡಿಗ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಂಕರ್ ಭಟ್ರಹಿತ್ಲು, ಉದ್ಯಮಿ ಮಂಜುನಾಥ ನಾಯ್ಕ ಇದ್ದರು.
ಶಿವರಾತ್ರಿ ಜಾಗರಣೆ ಪ್ರಯುಕ್ತ ಬೆಳಿಗ್ಗೆ 6 ಗಂಟೆಯ ವರೆಗೂ ಖ್ಯಾತ ಕಲಾವಿದರಿಂದ ವಿವಿಧ ಕಾರ್ಯಕ್ರಮ ನಡೆದವು. ಜಾಗರಣೆ ಉತ್ಸವದಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.