ADVERTISEMENT

ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಡಿ.3ಕ್ಕೆ

ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 13:04 IST
Last Updated 19 ಅಕ್ಟೋಬರ್ 2024, 13:04 IST
ಶಿರಸಿಯ ಆಡಳಿತ ಸೌಧದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿದರು
ಶಿರಸಿಯ ಆಡಳಿತ ಸೌಧದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿದರು   

ಶಿರಸಿ: ಎರಡೂವರೆ ದಶಕಗಳ ಬಳಿಕ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.3 ಮತ್ತು 4ರಂದು ಶಿರಸಿಯಲ್ಲಿ ನಡೆಯಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಆಡಳಿತ ಸೌಧದಲ್ಲಿ ಶನಿವಾರ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದ ನೆಮ್ಮದಿಯ ರಂಗಧಾಮದಲ್ಲಿ ಸಮ್ಮೇಳನ ನಡೆಯಲಿದೆ. ಎಲ್ಲಾ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಸಾಹಿತ್ಯ ಸಮ್ಮೇಳನದ ದಿನ ಮಾರಿಕಾಂಬಾ ದೇವಾಲಯದ ಬಳಿಯಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ. ಊಟೋಪಚಾರ ವ್ಯವಸ್ಥೆ ಸೇರಿದಂತೆ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಬೇಕು. ಸಮಿತಿಯಲ್ಲಿರುವ ಸದಸ್ಯರು ತಮ್ಮ ಜವಾಬ್ದಾರಿ ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಬೇಕು. ಸಮ್ಮೇಳನಕ್ಕೆ ಸರ್ಕಾರದಿಂದ ₹3 ಲಕ್ಷ ಅನುದಾನ ಬರಲಿದೆ. ಆದರೆ ₹17 ಲಕ್ಷ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಹಾಗಾಗಿ ಎಲ್ಲರ ಸಹಕಾರ ಅಗತ್ಯವಿದೆ. 25 ವರ್ಷಗಳ ನಂತರ ಶಿರಸಿಯಲ್ಲಿ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಸಮ್ಮೆಳನಾಧ್ಯಕ್ಷರ ಆಯ್ಕೆ, ಲಾಂಛನ ಬಿಡುಗಡೆ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ಹೇಳಿದರು. 

ADVERTISEMENT

ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಹಲವು ಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ವಸತಿ, ಊಟೋಪಚಾರ, ಸ್ವಾಗತ, ಮೆರವಣಿಗೆ ಸೇರಿ ಹಲವು ಉಪ ಸಮಿತಿಗಳನ್ನು ರಚಿಸಲಾಗುತ್ತದೆ. ಶಿಕ್ಷಕರ ಸಂಘ, ನೌಕರರ ಸಂಘದ ಕೊಡುಗೆ ಅಪಾರವಾಗಿರುತ್ತದೆ. ಶಿರಸಿಯಲ್ಲಿ ನಡೆಯಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನ ಈ ಹಿಂದೆ ನಡೆದ ಎಲ್ಲಾ ಸಾಹಿತ್ಯ ಸಮ್ಮೇಳನಕ್ಕಿಂತ ಸುಂದರವಾಗಿ ನಡೆಯುವಂತೆ ಸಹಕಾರಸಬೇಕು ಎಂದರು.

ಪರಿಷತ್ ಶಿರಸಿ ಘಟಕದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಸ್ವಾಗತಿಸಿದರು. ತಹಶೀಲ್ದಾರ್ ಶ್ರೀಧರ ಮಂದಲಮನಿ, ಡಿಡಿಪಿಐ ಪಿ.ಬಸವರಾಜ, ಪೌರಾಯುಕ್ತ ಎಚ್.ಕಾಂತರಾಜ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ, ಬಿಇಒ ನಾಗರಾಜ ನಾಯ್ಕ, ಪರಿಷತ್ ಜಿಲ್ಲಾ ಘಟಕದ ಕಾರ್ಯದರ್ಶಿ ಪಿ.ಆರ್.ನಾಯ್ಕ, ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ನಾಯ್ಕ ಹಾಗೂ ಇತರರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.