ADVERTISEMENT

ಕೇಂದ್ರದ ಒ.ಬಿ.ಸಿ ಪಟ್ಟಿಯಲ್ಲಿ ಸೇರ್ಪಡೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 15:37 IST
Last Updated 1 ಆಗಸ್ಟ್ 2022, 15:37 IST
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನೂ ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕಾರವಾರದಲ್ಲಿ ಸೋಮವಾರ ಮನವಿ ಸಲ್ಲಿಸಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ ಇದ್ದಾರೆ.

ಕಾರವಾರ: ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನೂ ಒಳಗೊಂಡು ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಆದಷ್ಟು ಬೇಗ ಶಿಫಾರಸು ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕವು ಒತ್ತಾಯಿಸಿದೆ.

ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಮಹಾಸಭಾದ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರದ ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಮತ್ತು ಈಗಾಗಲೇ ಕೇಂದ್ರದ ಒ.ಬಿ.ಸಿ ಪಟ್ಟಿಯಲ್ಲಿರುವ ಸಮುದಾಯಗಳಿಗಿಂತಲೂ ವೀರಶೈವ ಸಮುದಾಯವು ಹಿಂದುಳಿದಿದೆ. ಇದು, ರಾಜ್ಯದ ಮೂರನೇ ಹಿಂದುಳಿದ ವರ್ಗಗಳ ಆಯೋಗದ (ನ್ಯಾಯಮೂರ್ತಿ ಚಿನ್ನಪ್ಪ ರೆಡ್ಡಿ ಆಯೋಗ) ವರದಿಯಲ್ಲೂ ಉಲ್ಲೇಖವಾಗಿದೆ. ಆದರೂ ಈ ಸಮುದಾಯಕ್ಕೆ ಕೇಂದ್ರದ ಒ.ಬಿ.ಸಿ ಪಟ್ಟಿಯಲ್ಲಿ ಮಾನ್ಯತೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಸಮುದಾಯದ 16 ಉಪ ಪಂಗಡಗಳು ಮಾತ್ರ ಕೇಂದ್ರದ ಇತರ ಹಿಂದುಳಿದ ಜಾತಿ ಪಟ್ಟಿಯಲ್ಲಿವೆ. ಉಳಿದ ಉಪ ಪಂಗಡಗಳಿಗೆ ಸೌಲಭ್ಯ ದೊರೆಯದೇ ಅನ್ಯಾಯವಾಗಿದೆ ಎಂದು ಹೇಳಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ಮಹಾಸಭಾದ ಜಿಲ್ಲಾ ಘಟಕದ ಉಸ್ತುವಾರಿ ಉಮೇಶ ಪಾಟೀಲ, ಪ್ರಮುಖರಾದ ಎಂ.ಬಿ.ತೋರಣಗಟ್ಟಿ, ಶಿವದೇವ ದೇಸಾಯಿ, ಬಸವರಾಜ ಓಶಿಮಠ, ಅಶೋಕ ಪಾಟೀಲ, ಯು.ಎಸ್.ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.