ADVERTISEMENT

ಹರಪನಹಳ್ಳಿ | ಶಿಕ್ಷಣ ಸಚಿವರಿಗೆ ವಿದ್ಯಾರ್ಥಿ ಪಾಲಕರ ಪತ್ರ

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಟಿ.ಸಿ ತೆಗೆದುಕೊಂಡು ಹೋಗುವಂತೆ ಶಿಕ್ಷಕರಿಂದ ಒತ್ತಡ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 15:47 IST
Last Updated 23 ಜೂನ್ 2024, 15:47 IST

ಹರಪನಹಳ್ಳಿ: ‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಅಕ್ಷರ ಕಲಿಸಲು ಮನವಿ ಮಾಡಿದರೆ, ವಿದ್ಯಾರ್ಥಿಗಳ ವರ್ಗಾವಣೆ ಪತ್ರ ತೆಗೆದುಕೊಂಡು ಹೋಗುವಂತೆ ಸರ್ಕಾರಿ ಶಾಲೆಯ ಶಿಕ್ಷಕರು ಒತ್ತಡ ಹೇರುತ್ತಿದ್ದಾರೆ’ ಎಂದು ತಾಲ್ಲೂಕಿನ ಮುತ್ತಿಗಿ ಗ್ರಾಮದ ಪಾಲಕರಾದ ಮಡಿವಾಳರ ಹಾಲೇಶ್ ಮತ್ತು ತಳಕಲ್ಲು ಬಸವರಾಜ್ ಅವರು ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದಾರೆ.

‘ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನಮ್ಮ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕರನ್ನು, ಶಿಕ್ಷಕರನ್ನು ವಿಚಾರಿಸಿದಾಗ ನಿಮ್ಮ ಮಗನ ವರ್ಗಾವಣೆ ಪತ್ರ ತೆಗೆದುಕೊಂಡು ಹೋಗುವಂತೆ ಒತ್ತಡ ಹೇರುತ್ತಿದ್ದಾರೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ತಿದ್ದಿ, ಬುದ್ದಿ ಹೇಳಬೇಕಾದ ಶಿಕ್ಷಕರೇ ಈ ರೀತಿ ಮಾತನಾಡುವುದು ಸರಿಯಲ್ಲ. ನಾವು ಬಡವರಿದ್ದು, ಮಕ್ಕಳನ್ನು ಖಾಸಗಿ ಶಾಲೆಯಲ್ಲಿ ಓದಿಸುವ ಶಕ್ತಿಯಿಲ್ಲ. ಕಲಿಕೆಯಲ್ಲಿ ಹಿನ್ನಡೆ ಇರುವುದನ್ನೇ ನೆಪವಾಗಿಟ್ಟುಕೊಂಡು ಜೂನ್ 14ರಂದು ನನ್ನ ಮಕ್ಕಳನ್ನು ಶಾಲೆಯ ಒಳಗೆ ಬಿಟ್ಟುಕೊಳ್ಳದೇ ಕಿರುಕುಳ ನೀಡಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಶಿಕ್ಷಕರಿಗೆ ಸೂಕ್ತ ನಿರ್ದೇಶನ ಕೊಟ್ಟು, ಅದೇ ಶಾಲೆಯಲ್ಲಿ ವ್ಯಾಸಂಗ ಮುಂದುವರಿಸಲು ಆದೇಶಿಸಬೇಕು’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT