ADVERTISEMENT

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡವರು SC ಮೀಸಲಾತಿ ತ್ಯಜಿಸಲಿ: ಸೇವಾಲಾಲ್ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 12:55 IST
Last Updated 21 ಫೆಬ್ರುವರಿ 2024, 12:55 IST
<div class="paragraphs"><p>ಸರ್ದಾರ್ ಸೇವಾಲಾಲ್ ಸ್ವಾಮೀಜಿ</p></div>

ಸರ್ದಾರ್ ಸೇವಾಲಾಲ್ ಸ್ವಾಮೀಜಿ

   

ಹಗರಿಬೊಮ್ಮನಹಳ್ಳಿ (ವಿಜಯನಗರ): ಲಂಬಾಣಿ ತಾಂಡಾಗಳಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವವರು ತಮಗಿರುವ ಪರಿಶಿಷ್ಟ ಜಾತಿ ಮೀಸಲಾತಿ ತ್ಯಜಿಸಬೇಕು ಎಂದು ಚಿತ್ರದುರ್ಗದ ಬಂಜಾರ ಸೇವಾಲಾಲ್ ಗುರುಪೀಠದ ಜಗದ್ಗುರು ಸರ್ದಾರ್ ಸೇವಾಲಾಲ್ ಸ್ವಾಮೀಜಿ ತಾಕೀತು ಮಾಡಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರಿಶ್ಚಿಯನ್ ಪಾದ್ರಿಗಳು, ಮಷಿನರಿಗಳು ತಾಂಡಾಗಳಲ್ಲಿ ಬಡತನ, ಮುಗ್ಧತೆಯನ್ನು ದುರುಪಯೋಗಪಡಿಸಿಕೊಂಡು ಆಮಿಷ, ಅಸೆಗಳನ್ನು ಒಡ್ಡಿ ಮತಾಂತರ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಈಗಾಗಲೇ ಮತಾಂತರಗೊಂಡವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವುದಾಗಿ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಸೂರೆಗೊಂಡನಕೊಪ್ಪದಲ್ಲಿ ಈಚೆಗೆ ನಡೆದ ಸಂತ ಸೇವಾಲಾಲ್ ಜಯಂತ್ಯುತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವವಹಿಸದಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಂದಿದ್ದರೆ ಸಮಾಜದ ಬೇಡಿಕೆಗಳನ್ನು ಸಲ್ಲಿಸಲು ನಿರ್ಧರಿಸಲಾಗಿತ್ತು, ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಮತ್ತು ಬಂಜಾರ ಸಮಾಜವನ್ನು ಮೀಸಲಾತಿಯಿಂದ ಹೊರಗಿಡುವ ಹುನ್ನಾರ ಕುರಿತಂತೆ ಚರ್ಚಿಸಬೇಕಿತ್ತು ಎಂದರು.

ಪರಿಶಿಷ್ಟ ಜಾತಿಯ ಒಳಮೀಸಲಾತಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಶಿಫಾರಸಿನಿಂದಾಗಿಯೇ ಹಿಂದಿನ ಸರ್ಕಾರ ಪೆಟ್ಟು ತಿಂದಿದೆ. ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಶಿಫಾರಸು ವಾಪಾಸು ಪಡೆಯಬೇಕು ಎಂದು ಸೇವಾಲಾಲ್ ಸ್ವಾಮೀಜಿ ಆಗ್ರಹಿಸಿದರು.

ಈಚೆಗೆ ಮಂಡಿಸಿದ ಬಜೆಟ್‍ನಲ್ಲಿ ಬಂಜಾರ ಸಮುದಾಯಕ್ಕೆ ಅನುದಾನ ಘೋಷಣೆ ಮಾಡಿಲ್ಲ, ತಾಂಡಾ ಆಭಿವೃದ್ಧಿ ನಿಗಮಕ್ಕೆ ₹ 500 ಕೋಟಿ ನೀಡಬೇಕು ಎಂದು ಆಗ್ರಹಿಸಿದರು.

ಕೇವಲ ಪ್ರಭಾವಿ ಮಠಮಾನ್ಯಗಳಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ, ಹಿಂದುಳಿದ ಸಮಾಜಗಳ ಮಠಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿರುವ ₹11 ಸಾವಿರ ಕೋಟಿ ಅನುದಾನ ಬಳಕೆ ಮಾಡುವುದು ತಪ್ಪು, ಸಂವಿಧಾನದಲ್ಲಿ ಅದಕ್ಕೆ ಅವಕಾಶ ಇಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.