ಹೊಸಪೇಟೆ (ವಿಜಯನಗರ): ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಯ ಬಂಧನ ವಿರೋಧಿಸಿ ಸಂಘಟನೆಯ ಕಾರ್ಯಕರ್ತರು ಮಂಗಳವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.
ಮಂಗಳೂರು–ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಕಾಟಿಪಳ್ಯ ಸೇರಿದಂತೆ ಇತರರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ವಿನಾಕಾರಣ ಬಂಧಿಸಲಾಗಿದೆ. ಟೋಲ್ ಗೇಟ್ ತೆರವುಗೊಳಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೆಲ ತಿಂಗಳ ಹಿಂದೆ ಹೇಳಿದ್ದರು. ಆದರೆ, ಇದುವರೆಗೆ ತೆರವಿಗೆ ಕ್ರಮ ಕೈಗೊಂಡಿಲ್ಲ. ಕೂಡಲೇ ಟೋಲ್ ತೆಗೆದು, ಬಂಧಿತರ ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಘಟನೆಯ ಅಧ್ಯಕ್ಷ ಮೊಹಮ್ಮದ್ ಖಾಲಿದ್, ಕಾರ್ಯದರ್ಶಿ ಈಡಿಗರ ಮಂಜುನಾಥ, ರಾಜ್ಯ ಘಟಕದ ಉಪಾಧ್ಯಕ್ಷ ಬಿ. ಮಹೇಶ, ಖಜಾಂಚಿ ಮಾಲತೇಶ್, ಉಪಾಧ್ಯಕ್ಷ ಅಲ್ತಾಫ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.