ಹಗರಿಬೊಮ್ಮನಹಳ್ಳಿ: ಜೆಡಿಎಸ್ ಶಾಸಕ ಕೆ.ನೇಮರಾಜನಾಯ್ಕ ಅವರು ಈಚೆಗೆ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ ಆರೋಪಿಸಿದ್ದಾರೆ.
ಸೋಮವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ಜುಲೈ 4ರಂದು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಒಂದು ‘ವೇದಿಕೆ, ಹಲವು ಈಡೇರಿಕೆ’ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರೂ ವೇದಿಕೆಯಲ್ಲಿ ಬಹುಪಾಲು ಪಕ್ಷದ ಮುಖಂಡರೇ ತುಂಬಿದ್ದರು. ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಸನ್ಮಾನಿಸುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲ ನೀಡಿದವರ ಋಣ ಸಂದಾಯ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಕೆಎಸ್‍ಆರ್‌ಟಿಸಿಯ 7 ಬಸ್‍ಗಳನ್ನು ಮಧ್ಯಾಹ್ನದ ವರೆಗೂ ತಾಲ್ಲೂಕು ಕ್ರೀಡಾಂಗಣದಲ್ಲಿ ನಿಲ್ಲಿಸುವ ಮೂಲಕ ಪ್ರಯಾಣಿಕರಿಗೆ ತೊಂದರೆ ಮಾಡಿದ್ದಾರೆ ಎಂದರು.
ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಒಂದು ಪಕ್ಷದ ಮುಖಂಡರನ್ನು ಸನ್ಮಾನಿಸುವ ಔಚಿತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.
ಪ್ರತ್ಯೇಕವಾಗಿ ಪಕ್ಷದ ಕಾರ್ಯಕ್ರಮದಲ್ಲಿ ಸನ್ಮಾನ ಸಮಾರಂಭ ಮಾಡಬೇಕಿತ್ತೆ ವಿನಃ ಸರ್ಕಾರದಿಂದ ನಿರ್ಮಿಸಿದ್ದ ವೇದಿಕೆಯಲ್ಲಿ ಮಾಡಿದ್ದು ಖಂಡನೀಯ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.