ಕೂಡ್ಲಿಗಿ: ನಾಡಪ್ರಭು ಕೆಂಪೇಗೌಡ ಅವರ ಜಯಂತಿಯ ಆಚರಣೆಯನ್ನು ತಾಲ್ಲೂಕು ಆಡಳಿತ ನಿರ್ಲಕ್ಷ್ಯ ಮಾಡಿದೆ ಎಂದು ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಪಿ.ಜಿ. ಮಂಜುನಾಥ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿಯಲ್ಲಿ ತಹಶೀಲ್ದಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅನೇಕ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಅಸಮಾಧಾನಗೊಂಡ ಪಿ.ಜಿ. ಮಂಜುನಾಥ ಮಾತನಾಡಿ, ‘ಪ್ರತಿ ಗ್ರಾಮ ಪಂಚಾಯ್ತಿ ಹಾಗೂ ಶಾಲಾ, ಕಾಲೇಜುಗಳಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಮಾಡುವಂತೆ ಪೂರ್ವ ಬಾವಿ ಸಭೆಯಲ್ಲಿ ನಿರ್ಣಾಯ ಕೈಗೊಳ್ಳಲಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಯಂತಿಯನ್ನು ನೆಪ ಮಾತ್ರಕ್ಕೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಬರುವ ಮುನ್ನವೇ ಆಚರಣೆ ಮಾಡಿ ಕೈತೊಳೆದುಕೊಂಡಿದ್ದೀರಿ’ ಎಂದು ತಹಶೀಲ್ದಾರ್ ಎದುರು ತಮ್ಮ ಅಸಮಾಧಾನ ಹೊರ ಹಾಕಿದರು.
ನಂತರ ಒಕ್ಕಲಿಗರ ಮುಖಂಡರ ಮನವೊಲಿಸಿದ ತಹಶೀಲ್ದಾರ್ ಟಿ. ಜಗದೀಶ, ಇನ್ನು ಮುಂದೆ ಯಾವುದೇ ಜಯಂತಿ ಈ ರೀತಿ ಅಗಲು ಬಿಡದೆ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೂ ಮೊದಲು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಪಿ. ಶಿವರಾಜ್ ಮಾತನಾಡಿದರು. ಗ್ರೇಡ್-2 ತಹಶೀಲ್ದಾರ್ ಕುಮಾರಸ್ವಾಮಿ, ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಡಿ. ರಂಗಪ್ಪ, ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಜಿ. ಮಂಜುನಾಥ, ಉಪಾಧ್ಯಕ್ಷ ಹನುಮಂತಪ್ಪ, ನೀರ್ಕಲಪ್ಪ, ವಿರುಪಾಕ್ಷಪ್ಪ, ಪಿ. ಗುರುಸ್ವಾಮಿ, ವೀರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.