ಕೂಡ್ಲಿಗಿ (ವಿಜಯನಗರ): ‘ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೆ ವಯಸ್ಸಾಗಿದೆ ಎಂಬ ಕಾರಣಕ್ಕಾಗಿ ಅವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಕೂಡ್ಲಿಗಿಯಲ್ಲಿ ಬಿಜೆಪಿ ಮುಖಂಡ ಬಂಗಾರು ಹನುಮಂತು ಅವರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿದರು. ‘ಗೋಪಾಲಕೃಷ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಇದೆಯಲ್ಲ’ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು, ಯಾರಿಗೆ ಟಿಕೆಟ್ ಕೊಡಬೇಕು, ಕೊಡಬಾರದು ಎನ್ನುವುದನ್ನು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದ ಗೋಪಾಲಕೃಷ್ಣ ಅವರಿಗೆ ಪಕ್ಷ ಎಲ್ಲ ಸ್ಥಾನಮಾನಗಳನ್ನು ಕೊಟ್ಟಿದೆ. ಅವರು ಸುದೀರ್ಘ ಕಾಲದಿಂದ ಸಾರ್ವಜನಿಕ ಜೀವನದಲ್ಲಿದ್ದಾರೆ. ಎಲ್ಲರೂ ಅವರನ್ನು ಗೌರವಿಸುತ್ತಾರೆ ಎಂದಷ್ಟೇ ಹೇಳಿ ಜಾರಿಕೊಂಡರು.
ಸೋಮಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಯಾವ ಕಾರಣಕ್ಕೂ ಅವರು ಬಿಜೆಪಿ ತೊರೆದು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಯಾರಿಗೆ ಟಿಕೆಟ್ ನೀಡಬೇಕು, ನೀಡಬಾರದು ಎಂದು ಎಲ್ಲಿಯೂ ನಿರ್ಧಾರವಾಗಿಲ್ಲ. ಯಾರನ್ನೂ ಕೈಬಿಡುವ ಪ್ರಶ್ನೆಯೇ ಇಲ್ಲ. ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಪುನಃ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.
ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ನೀಡಿರುವುದರಿಂದ ರಾಜ್ಯದಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಸದ್ಯ ಅವರು ಬಿಜೆಪಿ ಸೇರಲು ಕಾನೂನು ತೊಡಕುಗಳಿವೆ. ರಾಮನಗರ ಜಿಲ್ಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಿದ್ದಾರೆ. ಅವರ ಸಹೋದರ ಸಂಸದರಿದ್ದಾರೆ. ಮಾಜಿ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ. ಹೀಗಾಗಿ ಅಲ್ಲಿ ಯಾವಾಗಲೂ ರಾಜಕೀಯ ಜಿದ್ದು ಇರುತ್ತದೆ. ನಾವು ನಮ್ಮ ಶಕ್ತಿಯನ್ನು ಬೆಳೆಸಿಕೊಂಡು ಅಲ್ಲಿ ಕನಿಷ್ಠ ಮೂರು ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂಬ ಭರವಸೆ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.