ADVERTISEMENT

ವಿಜಯನಗರ: ಆಶಾ ಕಾರ್ಯಕರ್ತೆ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 11:31 IST
Last Updated 28 ಸೆಪ್ಟೆಂಬರ್ 2022, 11:31 IST
   

ಹೊಸಪೇಟೆ (ವಿಜಯನಗರ): ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ಕೂಡ್ಲಿಗಿಯ ಆಶಾ ಕಾರ್ಯಕರ್ತೆ ಶೈಲಜಾ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಲೀಂ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕೂಡ್ಲಿಗಿ ತಾಲ್ಲೂಕಿನ ಹುಡೇಂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಶೈಲಜಾ ಅವರು ಸೆ. 26ರಂದು ಕೂಡ್ಲಿಗಿಯಲ್ಲಿ ಏರ್ಪಡಿಸಿದ್ದ ಮಿನಿ ವಿಧಾನಸೌಧದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿರುವಾಗ ಅಪಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಅವರದಲ್ಲದ ಕೆಲಸಕ್ಕೆ ಕರೆಸಿಕೊಳ್ಳಲಾಗಿತ್ತು. ಘಟನೆಗೆ ಯಾರು ಹೊಣೆ? ಆರೋಗ್ಯ ಇಲಾಖೆಯ ಬೇಜವಾಬ್ದಾರಿಯಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.

ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಗೌರವ ಧನ ನೀಡದೆ ಸರ್ಕಾರದ ವಿವಿಧ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಅವರು ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಶೈಲಜಾ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು. ಅವರದಲ್ಲದ ಕೆಲಸಕ್ಕೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಆಶಾ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಎಂ.ಶಾಂತಾ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್, ವೀರಮ್ಮ, ಮಹೇಶ್ವರಿ, ಗೀತಾ, ಚೌಡಮ್ಮ, ಸುನಿತಾ, ರಾಧಮ್ಮ, ಗೌರಿ, ರಾಜೇಶ್ವರಿ, ನಾಗಮ್ಮ, ಗುಲ್ನಾಜ್ ಬೇಗಂ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.