ವಿಜಯಪುರ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಇಬ್ಬರು ಮಹಿಳಾ ಸಾಧಕಿಯರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 11ರಂದು ಮಧ್ಯಾಹ್ನ 12.15ಕ್ಕೆ ನಡೆಯುವ 15ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ತಿಳಿಸಿದರು.
ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಡಾ.ದಾಕ್ಷಾಯಿಣಿ ಎಸ್. ಅಪ್ಪಾ ಹಾಗೂ ಮುಂಬೈನ ‘ಸರ್ಫೋಜಿರಾಜೆ ಭೋಸಲೆ ಸೆಂಟರ್’ ನಡೆಸುತ್ತಿರುವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾದ ಡಾ.ಸಂಧ್ಯಾ ಪುರೇಚ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಹಿಳಾ ವಿಶ್ವವಿದ್ಯಾಲಯದಿಂದ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 77 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು ಎಂದರು.
ಈ ಘಟಿಕೋತ್ಸವದಲ್ಲಿ 12,347 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಪದವಿ, 48 ವಿದ್ಯಾರ್ಥಿನಿಯರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗುವುದು ಎಂದರು.
ಹರಿಯಾಣದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುಷ್ಮಾ ಯಾದವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು ಎಂದು ತಿಳಿಸಿದರು.
ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ್, ಘಟಿಕೋತ್ಸವ ಸಂಯೋಜನಾಧಿಕಾರಿ ಪ್ರೊ.ಯು.ಕೆ.ಕುಲಕರ್ಣಿ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.